ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟಕರಾಗಿ ಇದೇ ಮೊದಲ ಬಾರಿಗೆ ರಾಜಕಾರಿಣಿಯೊಬ್ಬರು ನಾಡ ಹಬ್ಬ ದಸರಾವನ್ನು ಉದ್ಘಾಟಿಸುತ್ತಿರುವುದು ವಿಶೇಷ ಸಂಗತಿ. ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಎಸ್.ಎಂ.ಕೃಷ್ಣ ಅವರನ್ನು ಉದ್ಘಾಟಕರಾಗಿ ಆಯ್ಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಅಕ್ಟೋಬರ್ 6ರಂದು ಶುರುವಾಗಲಿರುವ ನಾಡಹಬ್ಬ ದಸರಾಗೆ ಚಾಮುಂಡಿ ಬೆಟ್ಟದಲ್ಲಿ ನಾಡ ದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ದಸರಾಗೆ ಚಾಲನೆ ನೀಡಲಾಗುತ್ತದೆ. ಈವರೆಗೆ ಸಾಹಿತ್ಯ, ಕಲೆ, ಸಾಂಸ್ಕೃತಿಕ ಕ್ಷೇತ್ರದಲ್ಲಿ ದುಡಿದವರನ್ನು ದಸರಾ ಉದ್ಘಾಟನೆಗೆ ಆಯ್ಕೆ ಮಾಡಲಾಗುತ್ತಿತು. ಆದರೆ, ಈ ಬಾರಿ ರಾಜ್ಯ ಸರ್ಕಾರ ರಾಜಕಾರಿಣಿಯೊಬ್ಬರನ್ನು ಆಯ್ಕೆ ಮಾಡುವ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದೆ.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾತನಾಡಿ, ಎಸ್.ಎಂ.ಕೃಷ್ಣ ಅವರಿಂದ ಮೈಸೂರು ಭಾಗದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ ಇದೇ ಕಾರಣಕ್ಕೆ ಅವರನ್ನು ಉದ್ಘಾಟಕರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಇಡೀ ವಿಶ್ವವನ್ನೇ ಬೆಂಗಳೂರೆಡೆಗೆ ತಿರುಗಿ ನೋಡುವಂತೆ ಮಾಡಿದ ಮಾಜಿ ಸಿ.ಎಂ. ಎಸ್.ಎಂ.ಕೃಷ್ಣ ಅವರನ್ನು ದಸರಾ ಉದ್ಘಾಟಕರಾಗಿ ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.