ಮಾಜಿ ಶಿಕ್ಷಣ ಸಚಿವ ಹಾಗೂ ತಿಪಟೂರು ಕ್ಷೇತ್ರದ ಮಾಜಿ ಶಾಸಕ ಬಿ.ಸಿ. ನಾಗೇಶ್ ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನಲ್ಲಿರುವ ಪುತ್ರಿಯ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು.ಕಳೆದ ಒಂದು ವರ್ಷದಿಂದ ಬಿ.ಸಿ. ನಾಗೇಶ್ ಅವರು ಬ್ರೈನ್ ಟ್ಯೂಮರ್ನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅವರ ನಿಧನದ ಸುದ್ದಿ ಬಿಜೆಪಿ ಹಾಗೂ ಅವರ ಅಭಿಮಾನಿಗಳಲ್ಲಿ ಆಘಾತ ಮೂಡಿಸಿದೆ.

ಬಿ.ಸಿ. ನಾಗೇಶ್ ಅವರು ತಿಪಟೂರು ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2008 ಮತ್ತು 2018ರ ವಿಧಾನಸಭಾ ಚುನಾವಣೆಯಲ್ಲಿ ಅವರು ಗೆಲುವು ಸಾಧಿಸಿದ್ದರು.ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಶಿಕ್ಷಣ ಕ್ಷೇತ್ರದಲ್ಲಿ ಹಲವು ಸುಧಾರಣೆಗಳನ್ನು ಜಾರಿಗೆ ತರಲು ಅವರು ಶ್ರಮಿಸಿದ್ದರು.ಆರ್ಎಸ್ಎಸ್ ಕಾರ್ಯಕರ್ತರಾಗಿ ಸಾರ್ವಜನಿಕ ಜೀವನ ಆರಂಭಿಸಿದ ನಾಗೇಶ್, ಆರ್ಎಸ್ಎಸ್ನ ಪೂರ್ಣಾವಧಿ ಕಾರ್ಯಕರ್ತರಾಗಿಯೂ ಸೇವೆ ಸಲ್ಲಿಸಿದ್ದರು. ಬಳಿಕ ಆರ್ಎಸ್ಎಸ್ ಮೂಲಕ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ಅವರ ಆಪ್ತರಾಗಿದ್ದರು. 2023ರ ವಿಧಾನಸಭಾ ಚುನಾವಣೆಯಲ್ಲಿ ಅವರು ಸೋಲು ಅನುಭವಿಸಿದ್ದರು.

ಬಿ.ಸಿ. ನಾಗೇಶ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಂತಾಪ ಸೂಚಿಸಿದ್ದಾರೆ.ನಾಗೇಶ್ ಅವರ ಸರಳತೆ, ವೈಚಾರಿಕ ಬದ್ಧತೆ, ನಿಷ್ಠೆ ಹಾಗೂ ಜನಪರ ಕಾಳಜಿಯನ್ನು ಸ್ಮರಿಸಿರುವ ವಿಜಯೇಂದ್ರ, ಶಾಸಕರಾಗಿ ಮತ್ತು ಸಚಿವರಾಗಿ ಅವರು ಸಲ್ಲಿಸಿದ ಸೇವೆ, ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಾಗೂ ಪಕ್ಷದ ಸಂಘಟನೆಗೆ ಮಾಡಿದ ಕಾರ್ಯ ಅಪಾರ ಎಂದು ಹೇಳಿದ್ದಾರೆ.ಅವರ ಅಗಲಿಕೆಯಿಂದ ಬಿಜೆಪಿ ಪಕ್ಷ ಹಾಗೂ ರಾಜ್ಯ ಒಬ್ಬ ಸಜ್ಜನ ಜನಪ್ರತಿನಿಧಿ ಮತ್ತು ಆದರ್ಶ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ ಎಂದು ವಿಜಯೇಂದ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಬಿ.ಸಿ. ನಾಗೇಶ್ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ತಮ್ಮ ಆತ್ಮೀಯ ಸ್ನೇಹಿತರಾಗಿದ್ದ ನಾಗೇಶ್ ಅವರು ಸರಳ ಹಾಗೂ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದರು. ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಶಿಕ್ಷಣ ಸಚಿವರಾಗಿ ಅತ್ಯಂತ ಸಮರ್ಥವಾಗಿ ಸೇವೆ ಸಲ್ಲಿಸಿದ್ದರು ಎಂದು ಬೊಮ್ಮಾಯಿ ಸ್ಮರಿಸಿದ್ದಾರೆ.ಶಿಕ್ಷಣ ಕ್ಷೇತ್ರದ ಅಭಿವೃದ್ಧಿ ಹಾಗೂ ತಿಪಟೂರು ಮತ್ತು ತುಮಕೂರು ಭಾಗದ ಜನರ ಸೇವೆಗೆ ನಾಗೇಶ್ ನೀಡಿದ ಕೊಡುಗೆ ಸದಾ ಸ್ಮರಣೀಯ. ಅವರ ಅಗಲಿಕೆಯಿಂದ ಬಿಜೆಪಿ ಮಾತ್ರವಲ್ಲದೆ ತುಮಕೂರು ಭಾಗದ ಜನತೆ ಹಾಗೂ ಅಪಾರ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ ಎಂದು ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.






