ಬೆಂಗಳೂರು:ಏ.೦5: ಮಾಜಿ ಲೋಕಸಭಾ ಸದಸ್ಯ ಹಾಗೂ ಮಂಡ್ಯ ಜಿಲ್ಲೆಯ ಪ್ರಭಾವಿ ರಾಜಕೀಯ ನಾಯಕ ಎಲ್.ಆರ್.ಶಿವರಾಮೇ ಗೌಡ ಅವರು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿವರಾಮೇಗೌಡ ಅವರನ್ನು ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಿಟಿ ರವಿ, ಗೋಪಾಲಯ್ಯ, ಡಾ.ಸುಧಾಕರ್ ಅವರು ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು. ನಂತರ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಪಡೆದುಕೊಂಡಿದ್ದಾರೆ.

ಶಿವರಾಮೇ ಗೌಡರ ಜೊತೆಗೆ ಈ ಸಂದರ್ಭದಲ್ಲಿ ಅವರ ಪುತ್ರ ಮತ್ತು ಬೆಂಬಲಿಗರು ಕೂಡ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ನಾಗಮಂಗಲ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅವರು ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ನಾಗಮಂಗಲದಲ್ಲಿ ಬಿಜೆಪಿ ಸಂಘಟನೆ ಕೊರತೆ ಎದುರಿಸುತ್ತಿದ್ದು, ಶಿವರಾಮೇಗೌಡ ಅವರಂತಹ ಪ್ರಭಾವಿ ನಾಯಕರು ಬಿಜೆಪಿಗೆ ಸೇರ್ಪಡೆಯಾಗಿರುವುದು ಕಮಲ ನಾಯಕರಿಗೆ ಹೆಚ್ಚಿನ ಶಕ್ತಿ ತುಂಬಿದೆ. ಈ ಹಿಂದೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ನಲ್ಲಿದ್ದ ಅವರು ಶಾಸಕರಾಗಿ ಹಾಗೂ ಒಂದು ಬಾರಿ ಮಂಡ್ಯ ಲೋಕಸಭಾ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ.






