ಇಂಧನ ಕೊರತೆ ಮತ್ತು ಎಲ್‌ಪಿಜಿ ಸರಬರಾಜಿನ ಸಮಸ್ಯೆ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಟೀಕೆ ವ್ಯಕ್ತವಾಗಿದೆ. ಈ ಬಗ್ಗೆ ಕೆ.ಹೆಚ್. ಮುನಿಯಪ್ಪ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.ಇಂಧನ ಹಾಗೂ ಅನಿಲ ಸರಬರಾಜು ವಿಷಯದಲ್ಲಿ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿರುವ ಅವರು, ದೇಶದ ವಿವಿಧ ಭಾಗಗಳಲ್ಲಿ ಎಲ್‌ಪಿಜಿ ಗ್ಯಾಸ್, ವಾಹನಗಳ ಗ್ಯಾಸ್ ಸಿಲಿಂಡರ್ ಹಾಗೂ ಪೆಟ್ರೋಲ್-ಡೀಸೆಲ್ ಪೂರೈಕೆಯಲ್ಲಿ ತೊಂದರೆ ಉಂಟಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದರಿಂದ ಸಾಮಾನ್ಯ ಜನರ ಜೀವನದಲ್ಲಿ ವ್ಯತ್ಯಯ ಉಂಟಾಗುತ್ತಿದ್ದು, ಹೋಟೆಲ್ ಉದ್ಯಮಿಗಳು, ಗೃಹಿಣಿಯರು ಹಾಗೂ ಸಾರ್ವಜನಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಂಡು ಇಂಧನ ಕೊರತೆಯನ್ನು ನಿವಾರಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯಗಳಲ್ಲಿ ಇಂಧನ ಸರಬರಾಜು ಸಮರ್ಪಕವಾಗಿಲ್ಲ ಎಂಬ ಆರೋಪಗಳ ನಡುವೆ, ಈ ವಿಚಾರ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಇಂಧನ ಕೊರತೆಯಿಂದ ಜನಜೀವನದ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸಬೇಕೆಂಬ ಒತ್ತಾಯ ಕೇಳಿಬರುತ್ತಿದೆ.






