
ಮಂಡ್ಯ: ಗಣಪತಿ ವಿಸರ್ಜನೆ ವೇಳೆ ಹಿಂದೂ ಮುಸ್ಲಿಂ ಗಲಾಟೆ ನಡೆದಿದ್ದು, ಗಣಪತಿ ಮೇಲೆ ಕಲ್ಲು, ಚಪ್ಪಲಿ ತೂರಿದ್ದಾರೆ ಮುಸ್ಲಿಂ ಸಮುದಾಯಕ್ಕೆ ಸೇರಿದ ಕಿಡಿಗೇಡಿಗಳು. ನಾಗಮಂಗಲ ಪಟ್ಟಣದ ಮಂಡ್ಯ ರಸ್ತೆಯಲ್ಲಿ ಘಟನೆ ನಡೆದಿದೆ. ಘಟನೆಯಿಂದ ಇಡೀ ನಾಗಮಂಗಲ ಉದ್ತಿಕ್ತ ವಾತಾವರಣ ನಿರ್ಮಾಣ ಆಗಿದ್ದು, ಠಾಣೆ ಮುಂದೆ ಗಣಪತಿ ತಂದು ಹಿಂದೂ ಯುವಕರ ಪ್ರತಿಭಟನೆ ಮಾಡಿದ್ದಾರೆ. ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿ ಬಂದೋಬಸ್ತ್ ಮಾಡಲಾಗಿದೆ. ನಾಗಮಂಗಲದಲ್ಲಿ ಮಂಡ್ಯ ಡಿಸಿ ಹಾಗು ಎಸ್‌ಪಿ ಮೊಕ್ಕಾಂ ಹೂಡಿದ್ದಾರೆ.

ನಾಗಮಂಗಲದಲ್ಲಿ ಆಕ್ರೋಶ ಭುಗಿಲೆದ್ದಿದ್ದು, ಉದ್ರಿಕ್ತರು ಬಟ್ಟೆ ಅಂಗಡಿ, ಪೇಯಿಂಟ್ ಅಂಗಡಿಗಳಿಗೆ ಬೆಂಕಿ ಹಚ್ಚಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಮಾಡಿದ್ದು, ಲಘು ಲಾಠಿ ಪ್ರಹಾರ ಕೂಡ ನಡೆಸಿದ್ದಾರೆ. ಮುಸ್ಲಿಂ ಸಮುದಾಯದ ಕಿಡಿಗೇಡಿಗಳು ಹಿಂದೂಗಳ ಅಂಗಡಿ ಮಳಿಗೆಗಳನ್ನು ಟಾರ್ಗೆಟ್ ಮಾಡಿ ಬೆಂಕಿ ಹಚ್ಚಿ ದಾಂಧಲೆ ನಡೆಸಿದ್ದಾರೆ. ನಾಗಮಂಗಲದಲ್ಲಿ ಪೊಲೀಸರು ಹೈ ಅಲರ್ಟ್ ಘೋಷಣೆ ಮಾಡಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ 144 ಸೆಕ್ಷನ್ ಜಾರಿ ಮಾಡಿದ್ದಾರೆ.

ರಾಜ್ಯ ಕೃಷಿ ಸಚಿವರೂ ಆಗಿರುವ ನಾಗಮಂಗಲ ಶಾಸಕ ಎನ್ ಚಲುವರಾಯಸ್ವಾಮಿ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗು ಜಿಲ್ಲಾಧಿಕಾರಿ ಜೊತೆಗೆ ಮಾತನಾಡಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಸೂಚನೆ ಕೊಟ್ಟಿದ್ದಾರೆ. ದಕ್ಷಿಣ ವಲಯ ಐಜಿಗೆ ಸಿಎಂ ಸಿದ್ದರಾಮಯ್ಯ ಕರೆ ಮಾಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು, ಗಲಭೆ ಸೃಷ್ಟಿಗೆ ಕಾರಣ ಏನು..? ಗಲಭೆಗೆ ಕಾರಣರಾದವರ ಹೆಡೆಮುರಿ ಕಟ್ಟಿ. ಮುನ್ನಚ್ಚರಿಕೆ ವಹಿಸದ ಸ್ಥಳೀಯ ಪೊಲೀಸ್ ಅಧಿಕಾರಿಗಳ ವಿರುದ್ದವೂ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ ಎನ್ನಲಾಗಿದೆ.

ಎರಡೂ ಕಡೆಯಿಂದಲೂ ಕಲ್ಲು ತೂರಾಟಗಳು ನಡೆದಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿ ಕೂಡ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿ ಸಾರ್ವಜನಿಕರು-ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಪೆಟ್ರೋಲ್ ಬಾಂಬ್ ಸ್ಫೋಟಿಸಿ ತಲ್ವಾರ್ ಝಳಪಿಸುವ ದುಸ್ಸಾಹಸಕ್ಕೆ ಕೈ ಹಾಕಿರುವುದು ಕಾನೂನು ಸುವ್ಯವಸ್ಥೆ ವೈಫಲ್ಯ ಎಂದಿದ್ದಾರೆ.
ಪೊಲೀಸ್ ಠಾಣೆ ಎದುರು ರಕ್ಷಣೆ ಕೊಡಿ ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆಯೇ ಅನ್ಯ ಕೋಮಿನ ಪುಂಡರು ದಬ್ಬಾಳಿಕೆ ನಡೆಸುತ್ತಾರೆ ಎಂದರೆ ನಾವು ಎಲ್ಲಿದ್ದೇವೆ ಎನ್ನುವ ಅನುಮಾನ ಬರುತ್ತದೆ. ಇಲ್ಲಿ ಸ್ಥಳೀಯ ಪೊಲೀಸರ ವೈಫಲ್ಯವೂ ಎದ್ದು ಕಾಣುತ್ತಿದೆ. ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಸರಕಾರ ರಾಜಕೀಯ ಸ್ವಾರ್ಥಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವಾಗಿ ನಾಗಮಂಗಲದಲ್ಲಿ ಈ ಹೇಯ ಘಟನೆ ನಡೆದಿದೆ. ಇಂತಹ ಓಲೈಕೆ, ತುಷ್ಟೀಕರಣ ರಾಜಕಾರಣ ನಿಲ್ಲಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಕೆಟ್ಟ ದಿನಗಳು ದೂರವಿಲ್ಲ ಎಂದು ಕಿಡಿಕಾರಿದ್ದಾರೆ.
