ಬೆಂಗಳೂರು: ಮಂಡ್ಯದಲ್ಲಿ ಡಿಸೆಂಬರ್ 20ರಿಂದ 22ರವರೆಗೂ ನಡೆಯಲಿರುವ 87ನೇ ಆಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ.ರು. ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.
ಡಿಸೆಂಬರ್ 20ರಿಂದ ಮಂಡ್ಯಡಲ್ಲಿ ಮೂರು ದಿನಗಳ ಕಾಲ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸಮ್ಮೇಳನಾಧ್ಯಕ್ಷರಾಗಿ ಯಾರು ಆಯ್ಕೆಯಾಗಲಿದ್ದಾರೆ ಎಂಬುದು ಭಾರೀ ಕುತೂಹಲ ಹುಟ್ಟಿಸಿತ್ತು.ಇದೀಗ ಕನ್ನಡ ಸಾಹಿತ್ಯ ಪರಿಷತ್ತು ಇದಕ್ಕೆ ತೆರೆ ಎಳೆದಿದ್ದು, ಅಂತಿಮವಾಗಿ ಗೊ.ರು. ಚನ್ನಬಸಪ್ಪ ಅವರನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಭವನದಲ್ಲಿ ರಾಜ್ಯಾಧ್ಯಕ್ಷ ಡಾ. ಮಹೇಶ್ ಜೋಶಿ ಅಧ್ಯಕ್ಷತೆಯಲ್ಲಿ ನವೆಂಬರ್ 20ರಂದು ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ ರು ಚನ್ನಬಸಪ್ಪ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಗೊ.ರು.ಚನ್ನಬಸಪ್ಪ ಅವರ ಪರಿಚಯ:
ಜಾನಪದ ಸಾಹಿತಿಯಾಗಿ ಸಂಘಟಕರೂ ಸಾರ್ವಜನಿಕ ಸೇವಾಗ್ರೇಸರರೂ ಆಗಿರುವ ಗೊ.ರು. ಚನ್ನಬಸಪ್ಪ ಅವರು ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ ಗೊಂಡೇದಹಳ್ಳಿಯಲ್ಲಿ ರುದ್ರಪ್ಪಗೌಡರು-ಅಕ್ಕಮ್ಮ ದಂಪತಿಗಳಿಗೆ ಪುತ್ರರಾಗಿ 18-05-1930ರಲ್ಲಿ ಹುಟ್ಟಿದರು. ವಿದ್ಯಾರ್ಥಿಯಾಗಿದ್ದಾಗಲೇ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದ ಇವರು 18ನೇ ವಯಸ್ಸಿನಲ್ಲೇ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ವೃತ್ತಿಗೆ ಸೇರಿದರು. ಸರ್ಕಾರಿ ಸೇವೆಯ ಜತೆಜತೆಗೇ ವಿವಿಧ ಸಂಘಸಂಸ್ಥೆಗಳಿಗಾಗಿ ದುಡಿದರು.
ಗಾಂಧೀ ಗ್ರಾಮದಲ್ಲಿ ಸಮಾಜ ಶಿಕ್ಷಣವನ್ನು ಪಡೆದ ಗೊರುಚ ಅವರು ಭೂದಾನ ಚಳವಳಿ, ವಯಸ್ಕರ ಶಿಕ್ಷಣ, ಸೇವಾದಳಗಳಲ್ಲಿ ಕೆಲಸ ಮಾಡಿದ್ದಾರೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ಗಳಿಗೆ ಹೆಡ್ಕ್ವಾರ್ಟರ್ಸ್ ಕಮೀಷನರ್ ಆಗಿ ದುಡಿದಿರುವ ಇವರು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದಾರೆ.ಪತ್ರಿಕಾವೃತ್ತಿ ಬಲ್ಲ ಇವರು ‘ಜಾನಪದ ಜಗತ್ತು’, `ಪಂಚಾಯತ್ ರಾಜ್ಯ’, `ಕನ್ನಡ ಸಾಹಿತ್ಯ ಪರಿಷತ್ಪತ್ರಿಕೆ’ ಮೊದಲಾದ ಪತ್ರಿಕೆಗಳಿಗೆ ಸಂಪಾದಕರಾಗಿ ವಿಶೇಷ ಸೇವೆ ಸಲ್ಲಿಸಿದ್ದಾರೆ.
1992 ರಿಂದ 1995ರವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ 18ನೇ ಅಧ್ಯಕ್ಷರಾಗಿ ಅಪಾರ ಸೇವೆ ಸಲ್ಲಿಸಿದ್ದಾರೆ. ಕೊಪ್ಪಳ (೧೯೯೩), ಮಂಡ್ಯ (೧೯೯೪), ಮುಧೋಳಗಳಲ್ಲಿ (೧೯೯೫) ೬೨, ೬೩, ೬೪ನೇ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಯಶಸ್ವಿಯಾಗಿ ನಡೆಸಿದ್ದಾರೆ. ಇವರ ಅವಧಿಯಲ್ಲಿ ಅನೇಕ ಮೌಲಿಕ ಗ್ರಂಥಗಳನ್ನು ಪ್ರಕಟಿಸಿದ್ದಾರೆ.