ಗಣೇಶ ಹಬ್ಬದ ಆಚರಿಸುವ ಸಲುವಾಗಿ ರಾಜ್ಯ ಸರ್ಕಾರ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಸೂಚನೆ ಹೊರಡಿಸಿದೆ. ಇನ್ನೇನು ಗಣೇಶೋತ್ಸವಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಏಕಗವಾಕ್ಷಿ (Single Window Method) ಮೂಲಕ ಅನುಮತಿ ನೀಡಲು ಸರ್ಕಾರ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸುತ್ತೋಲೆ ಹೊರಡಿಸಿದೆ.
ಸರ್ಕಾರ ಆದೇಶದಲ್ಲಿ ಏನಿದೆ.?
ಗಣೇಶ ಪ್ರತಿಷ್ಠಾಪನೆಗೆ ಅಗತ್ಯವಿರುವ ಸ್ಥಳ, ಪೆಂಡಾಲ್, ವಿದ್ಯುತ್ ಸಂಪರ್ಕ ಇನ್ನು ಮುಂತಾದ ಪರವಾನಿಗೆಗಳನ್ನು ನೀಡಲು ಕಂದಾಯ, ಲೋಕೋಪಯೋಗಿ, ಇಂಧನ, ಅಗ್ನಿಶಾಮಕ ಮತ್ತು ಪೋಲಿಸ್ ಇಲಾಖೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸಂಯೋಜಿತವಾಗಿ ಗಣೇಶ ವಿಗ್ರಹ ಸ್ಥಾಪನೆಗೆ ಅಗತ್ಯವಿರುವ ಪರವಾನಗಿಯನ್ನು ಏಕಗವಾಕ್ಷಿ ಅಡಿಯಲ್ಲಿ ನೀಡಲು ಸೂಕ್ತ ಕ್ರಮ ವಹಿಸುವುದು.
ಎಲ್ಲಾ ನಗರ ಸೃಳೀಯ ಸಂಸ್ಥೆಗಳು ಪ್ರತಿ ವಾರ್ಡ್‌ಗಳ ಮಟ್ಟದಲ್ಲಿ ಸಂಬಂಧಿಸಿದ ವಿವಿಧ ಇಲಾಖೆಗಳ ಪ್ರತಿನಿಧಿಗಳನ್ನು ಒಳಗೊಂಡಂತೆ ಏಕ ಗವಾಕ್ಷಿ ವ್ಯವಸ್ಥೆಯನ್ನು ಸ್ಥಾಪಿಸಿ ಪ್ರಚುರ ಪಡಿಸುವುದು.
ಕಾರ್ಯಕ್ರಮದ ಆಯೋಜಕರು ನಿಗಧಿತ ನಮೂನೆಯಲ್ಲಿ ಮುಂಚಿತವಾಗಿ ಅರ್ಜಿ ಸಲ್ಲಿಸುವುದು ಹಾಗೂ ಆಯೋಜಕರು ಸಲ್ಲಿಸುವ ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗಳು ಜಂಟಿ ತಪಾಸಣೆ ಮಾಡಿ ಮೂರು ದಿನಗಳೊಳಗಾಗಿ ನಿಯಮಾನುಸಾರ ಪರವಾನಿಗೆಯನ್ನು ನೀಡಲು ಕ್ರಮ ವಹಿಸುವುದು.

ಪರವಾನಿಗೆ ನೀಡುವ ಮುನ್ನ ಆಯೋಜಕರಿಂದ ಕಾಲಕಾಲಕ್ಕೆ, ಮಾನ್ಯ ನ್ಯಾಯಲಯದ ನಿರ್ದೇಶನಗಳನ್ನು ಹಾಗೂ ಸರ್ಕಾರದ ವಿವಿಧ ಇಲಾಖೆಗಳಿಂದ ನೀಡಿರುವ ಸೂಚನೆಗಳನ್ನು ಪಾಲಿಸುವ ಬಗ್ಗೆ, ಮುಚ್ಚಳಿಕೆಯನ್ನು ಪಡೆಯುವುದು.
ಸಾರ್ವಜನಿಕ ಸುರಕ್ಷತೆ ಹಾಗೂ ಪರಿಸರ ಮಾಲಿನ್ಯ ಉಂಟಾಗದ ರೀತಿ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ ಆಯೋಜಕರಿಂದ ಖಾತರಿಪಡಿಸಿಕೊಳ್ಳುವುದು, ಅಗತ್ಯವಿರುವ ಕಡೆ ಸಿ.ಸಿ.ಕ್ಯಾಮರಾಗಳನ್ನು ಅಳವಡಿಸುವಂತೆ ಆಯೋಜಕರಿಗೆ ಸೂಚಿಸುವುದು.
ವಿಶೇಷವಾಗಿ ಹೈ-ಟೆನ್ನನ್ ತಂತಿ ಹಾದು ಹೋಗಿರುವ ಪ್ರದೇಶದಲ್ಲಿ ಯಾವುದೇ ಕಾರಣಕ್ಕೂ ಗಣೇಶ ಮೂರ್ತಿಯನ್ನು ಸ್ಥಾಪಿಸಲು ಅನುಮತಿ ನಿರ್ಬಂಧಿಸುವುದು.
ಉತ್ಸವಕ್ಕೆ ಮುಂಚಿತವಾಗಿ ನಾಗರೀಕ ಸಮಿತಿ, ಮೊಹಲ್ಲಾ ಸಮಿತಿ, ಕಾವಲು ಸಮಿತಿ ಮತ್ತಿತರ ಎಲ್ಲಾ ಸಂಘಸಂಸ್ಥೆಗಳ ಮುಖ್ಯಸ್ಥರನ್ನು ಒಳಗೊಂಡಂತೆ ಕೋಮು ಸೌಹಾರ್ದ ಸಭೆಗಳನ್ನು ಆಯೋಜಿಸಲು ಕ್ರಮ ವಹಿಸುವುದು.
ಎಲ್ಲಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಒಟ್ಟಾರೆ ಈ ಬಾರಿಯ ಗಣೇಶೋತ್ಸವಕ್ಕೆ ಅದ್ದೂರಿಯಾಗಿ ನಡೆಯಲಿದ್ದು, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ಸರ್ಕಾರ ಸನ್ನಧವಾಗಿದೆ.