ಚಾಮರಾಜಪೇಟೆಯ ವಿವಾದಿತ ಈದ್ಗಾ ಮೈದಾನದಲ್ಲಿ ಸರಕಾರದ ವತಿಯಿಂದಲೇ ಧ್ವಜಾರೋಹಣ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ.
ಗುರುವಾರ ನಡೆದ ಕಂದಾಯ ಅಧಿಕಾರಿಗಳ ಸಭೆಯಲ್ಲಿ ವಿವಾದಿತ ಜಾಗದಲ್ಲಿ ಯಾವುದೇ ಸಂಘ-ಸಂಘಟನೆ ವತಿಯಿಂದ ಕಾರ್ಯಕ್ರಮಕ್ಕೆ ಅವಕಾಶ ನೀಡದೇ ಇರಲು ತೀರ್ಮಾನಿಸಲಾಯಿತು.
ಯಾವುದೇ ಕಾರ್ಯಕ್ರಮಕ್ಕೆ ಅವಕಾಶ ನೀಡದೇ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ರಾಜ್ಯ ಸರಕಾರಕ್ಕೆ ಗುಪ್ತಚರ ಇಲಾಖೆ ನೀಡಿದ ಸಲಹೆ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಚಾಮರಾಜಪೇಟೆ ಈದ್ಗಾ ಮೈದಾನ ವಕ್ಫ್ ಮಂಡಳಿಗೆ ಸೇರಿದ್ದು ಎಂದು ಹೇಳಲಾಗಿತ್ತು. ಆದರೆ ಬಿಬಿಎಂಪಿ ಇದೀಗ ರೆವಿನ್ಯೂ ಇಲಾಖೆಗೆ ಸೇರಿದ್ದು ಎಂದು ವರದಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಈದ್ಗಾ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲು ಹಿಂದೂ ಹಾಗೂ ಮುಸ್ಲಿಂ ಮುಖಂಡರು ಪೈಪೋಟಿ ನಡೆಸಿದ್ದಾರೆ.
ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಈ ವರ್ಷದಿಂದ ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಸುವುದಾಗಿ ಘೋಷಿಸಿದ್ದರೆ, ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಗಣೇಶೋತ್ಸವ ಆಚರಿಸುವುದಾಗಿ ಹೇಳಿಕೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಗುಪ್ತಚರ ಇಲಾಖೆ ರಾಜ್ಯ ಸರಕಾರಕ್ಕೆ ಮಾಹಿತಿ ನೀಡಿದ್ದು, ವಿವಿಧ ಕಾರಣಗಳಿಗಾಗಿ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು. ಯಾವುದೇ ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.