ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಿಗ್ ಗಿಫ್ಟ್ ಸಿಕ್ಕಿದೆ. 7ನೇ ವೇತನ ಆಯೋಗ ಜಾರಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ವೇತನ ಜಾರಿ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಸಂಪುಟ ಬಿಟ್ಟಿತ್ತು. ಆಗಸ್ಟ್ 1 ರಿಂದ ವೇತನ ಆಯೋಗದ ಶಿಫಾರಸು ಜಾರಿಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ ಮಾಡಿದ್ದಾರೆ. ಶೇಕಡ 27 ವೇತನ ಹೆಚ್ಚಳಕ್ಕೆ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗಿದೆ. ಇಂದು ವಿಧಾನಸಭೆಯಲ್ಲಿ ಅಧಿಕೃತವಾಗಿ ಸಿಎಂ ಸಿದ್ದರಾಮಯ್ಯ ಪ್ರಕಟಿಸಲಿದ್ದಾರೆ ಎನ್ನಲಾಗಿದೆ.
ಮಾರ್ಚ್ 16 ರಂದು ಕೆ. ಸುಧಾಕರ್ ರಾವ್ ನೇತೃತ್ವದ ಸಮಿತಿಯಿಂದ ರಾಜ್ಯ 7ನೇ ವೇತನ ಆಯೋಗದ ವರದಿ ಸ್ವೀಕಾರ ಮಾಡಲಾಗಿತ್ತು. ಸಿಎಂ ಸಿದ್ದರಾಮಯ್ಯ ವರದಿ ಸ್ವೀಕಾರದ ಬಳಿಕ ವೇತನ ಆಯೋಗದ ಶಿಫಾರಸು ಜಾರಿ ಮಾಡುವ ಬಗ್ಗೆ ಹಣಕಾಸು ಇಲಾಖೆಯಿಂದ ಮಾಹಿತಿ ಕೇಳಿದ್ದರು. ಇದೀಗ ಹಣಕಾಸು ಇಲಾಖೆಯಿಂದ ವರದಿ ಬಂದಿದ್ದು, ಶೇಕಡ 27ರಷ್ಟು ವೇತನ ಹೆಚ್ಚಳ ಮಾಡುವ ತೀರ್ಮಾನವನ್ನು ಸಿಎಂ ಸಿದ್ದರಾಮಯ್ಯ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸಚಿವ ಸಂಪುಟ ಸಭೆಗೆ ಮಾಹಿತಿ ನೀಡಿದ್ದು, ಇಂದಿನ ಅಧಿವೇಶನದಲ್ಲಿ ಘೋಷಣೆ ಮಾಡಲಿದ್ದಾರೆ ಅನ್ನೋ ಮಾಹಿತಿ ಸಿಕ್ಕಿದೆ.
7ನೇ ವೇತನ ಆಯೋಗ ಜಾರಿಗೆ ನಿರ್ಧಾರ ಹಿನ್ನೆಲೆ, ರಾಜ್ಯ ಸರ್ಕಾರಕ್ಕೆ ರಾಜ್ಯ ಸರ್ಕಾರಿ ನೌಕರ ಸಂಘ ಅಭಿನಂದನೆ ಸಲ್ಲಿಸಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಜುಲೈ 1, 2022ರಿಂದ ವೇತನ ಜಾರಿ ಆಗಿದ್ದು, 2024ರ ಆಗಸ್ಟ್ 1ರಿಂದ ಆರ್ಥಿಕ ಸೌಲಭ್ಯವನ್ನು ನೀಡಲು ನಿರ್ಧಾರ ಮಾಡಲಾಗಿದೆ. ವೇತನ ಆಯೋಗ ಶಿಫಾರಸು ಮಾಡಿದ್ದ ಶೇಕಡ 27.50ರಷ್ಟು ವೇತನ ನಿಗದಿಗೆ ಸಚಿವ ಸಂಪುಟ ಅನುಮೋದನೆ ನೀಡಿರುವುದು ಸಂತೋಷದಾಯಕ ವಿಚಾರ ಎಂದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ರಾಜ್ಯದ ಎಲ್ಲ ಸಚಿವರಿಗೆ ಹಾಗೂ ಉನ್ನತ ಮಟ್ಟದ ಅಧಿಕಾರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷರಾದ ಷಡಾಕ್ಷರಿ ಅಭಿನಂದನೆ ತಿಳಿಸಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಣೆ ಮಾಡಿದ ಬಳಿಕ ವೇತನ ಎಷ್ಟು ಪ್ರಮಾಣ ಹೆಚ್ಚಾಗಿದೆ ಅನ್ನೋದ್ರ ಜೊತೆಗೆ ಯಾವಾಗಿನಿಂದ ಜಾರಿ ಅನ್ನೋ ಖಚಿತ ಮಾಹಿತಿ ಸಿಗಲಿದೆ.