ಬೆಂಗಳೂರು : ರಾಜ್ಯೋತ್ಸವ ಪ್ರಶಸ್ತಿ – 2024 ಪ್ರದಾನ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪ ಸಮಾರಂಭ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಿದ್ದು, ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪವನ್ನು ಕನ್ನಡ ಜನೋತ್ಸವವಾಗಿ ಆಚರಿಸಲು ಸಿಎಂ ನಿರ್ಧಾರಿಸಿದ್ದಾರೆ.
ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಸಿಎಂ, ರಾಜ್ಯೋತ್ಸವ ಪ್ರಶಸ್ತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಸೆಪ್ಟಂಬರ್ 30ರ ವರೆಗೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿದರು.
ಈ ಬಾರಿ ಒಟ್ಟು 69 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಆಯ್ಕೆಗೆ ಸಮಿತಿ ರಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಇನ್ನು ಕರ್ನಾಟಕ ಸುವರ್ಣ ಸಂಭ್ರಮ -50 ಎಲ್ಲಾ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ನಡೆಯುತ್ತಿದ್ದು, ಈಗಾಗಲೇ ಹಂಪಿಯಿಂದ ಆರಂಭವಾದ ಕನ್ನಡ ರಥ ಯಾತ್ರೆ 28 ಜಿಲ್ಲೆಗಳಲ್ಲಿ ಸಾಗಿ, ಇದೀಗ ರಥಯಾತ್ರೆಯ ಸಮಾರೋಪ ಸಮಾರಂಭ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆಯಲಿದೆ ಎಂದರು. ವಿಶೇಷ ಎಂದರೆ ಕರ್ನಾಟಕ ಸುವರ್ಣ ಸಂಭ್ರಮ – 50 ಸಮಾರೋಪ ಸಮಾರಂಭ ವಿಧಾನ ಸೌಧದ ಮುಂಭಾಗ ನಡೆಯಲಿದ್ದು, ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಹ ಇದೇ ಸಂದರ್ಭದಲ್ಲಿ ಮಾಡಲಾಗುವುದು ಎಂದು ಸಿಎಂ ಹೇಳಿದರು.
ಇದೇ ವೇಳೆ ಮೈಸೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಕಚೇರಿ ಅವರಣದಲ್ಲಿ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಪ್ರತಿಮೆ ಸ್ಥಾಪನೆಗೆ ಕಾಮಗಾರಿ ಪ್ರಗತಿಯಲ್ಲಿರುವ ಬಗ್ಗೆ ಮಾಹಿತಿಯನ್ನು ನೀಡಿದ್ದು, ಬಳ್ಳಾರಿಯಲ್ಲಿ ರಂಜಾನ್ ಸಾಬ್ ಸ್ಮಾರಕ ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂದರು.
ಅಲ್ಲದೇ ಧಾರವಾಡದಲ್ಲಿ ಅದರಗುಂಚಿ ಶಂಕರಗೌಡ ಸ್ಮಾರಕ ನಿರ್ಮಿಸಲು ಅಂದಾಜು ವೆಚ್ಚ ಸಲ್ಲಿಸಲಾಗಿದ್ದು, ಗದಗದಲ್ಲಿ ಅಂದಾನಪ್ಪ ದೊಡ್ಡ ಮೇಟಿ ಸ್ಮಾರಕ ನಿರ್ಮಾಣ ಹಂತದಲ್ಲಿದೆ ಎಂದು ಸಿಎಂ ತಿಳಿಸಿದರು.
ಇದರ ಹೊರತಾಗಿ 50 ಸಾಧಕ ಮಹಿಳೆಯ ಕುರಿತು 100 ಪುಟಗಳ 50 ಕೃತಿಗಳನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಮೂಲಕ ಮುದ್ರಿಸಲು ಮುಂದಾಗಿದ್ದು, ವಿಧಾನಸೌಧ ಆವರಣದಲ್ಲಿ 25 ಅಡಿ ಎತ್ತರದ ಭುವನೇಶ್ವರಿದೇವಿ ಕಂಚಿನ ಪ್ರತಿಮೆ ಕಾಮಗಾರಿ ಪ್ರಗತಿಯಲ್ಲಿದ್ದು, ನವೆಂಬರ್ 1ರಂದು ಅನಾವರಣ ಮಾಡಲು ಸಿದ್ಧತೆ ನಡೆಸಿದ್ದೇವೆ ಎಂದು ಹೇಳಿದರು.
ಅಷ್ಟೇ ಅಲ್ಲದೆ, ರಾಜ್ಯದ ನಾಲ್ಕು ವಲಯಗಳಲ್ಲಿ ವಿಶೇಷ ಕಾರ್ಯಕ್ರಮ ಮಾಡಲು ಪ್ಲಾನ್ ಮಾಡಿದ್ದು, ಮೈಸೂರಿನಲ್ಲಿ ಚಿಂತನಾ ಸಮಾವೇಶ, ರಾಯಚೂರಿಗೆ ಗೋಕಾಕ್ ಚಳವಳಿ ಸಂಸ್ಮರಣೆ, ಮಹಾರಾಷ್ಟ್ರದ ಜತ್ ತಾಲೂಕಿನಲ್ಲಿ ಗಡಿನಾಡು ಸಾಂಸ್ಕೃತಿಕ ಉತ್ಸವ ಮತ್ತು ಮಂಗಳೂರಿನಲ್ಲಿ ವಿವಿಧ ಅಕಾಡೆಮಿ ಸಹಯೋಗದಲ್ಲಿ ಬಹುಸಂಸ್ಕೃತಿ ಉತ್ಸವ ಆಯೋಜನೆ ಮಾಡಲಾಗುವುದು ಎಂದು ಸಿಎಂ ಹೇಳಿದರು.