ಹುಬ್ಬಳ್ಳಿ: ಬರ ಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕೇಂದ್ರದ ಹಣಕ್ಕಾಗಿ ಕಾಯುವ ಬದಲು ರಾಜ್ಯ ಸರ್ಕಾರ ತನ್ನ ಖಜಾನೆಯಿಂದಲೇ ರೈತರಿಗೆ ಬೆಳೆ ನಷ್ಟ ಪರಿಹಾರ ವಿತರಿಸಲು ಮುಂದಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ರಾಜ್ಯ ಸರ್ಕಾರ ನಷ್ಟದ ಸಮರ್ಪಕ ಅಂದಾಜು ನೀಡದ ಹೊರತು ಕೇಂದ್ರದಿಂದ ಅನುದಾನ ಬಿಡುಗಡೆ ಮಾಡುವ ಸಾಧ್ಯತೆ ಕಡಿಮೆ. ಕೇಂದ್ರ ತಂಡಗಳು ಬರ ಪರಿಸ್ಥಿತಿ ಅಧ್ಯಯನ ನಡೆಸಿದ್ದು, ರಾಜ್ಯ ಸರ್ಕಾರವೂ ವರದಿ ಕಳುಹಿಸಬೇಕು. ಇವೆರಡರ ವರದಿಗಳನ್ನು ಹೋಲಿಸಿ, ಎನ್‌ಡಿಆರ್‌ಎಫ್ ಮಾರ್ಗಸೂಚಿಗಳ ಪ್ರಕಾರ ಕೇಂದ್ರವು ಹಣವನ್ನು ಬಿಡುಗಡೆ ಮಾಡುತ್ತದೆ ಎಂದು ಅವರು ಹೇಳಿದರು.
ಸಿದ್ದರಾಮಯ್ಯ ಸರ್ಕಾರ ರೈತ ಮತ್ತು ಬಡವರ ವಿರೋಧಿ ಎಂದು ಬಣ್ಣಿಸಿದ ಅವರು, ಕಾಂಗ್ರೆಸ್ ನಾಯಕರು ತಮ್ಮ ತಮ್ಮಲ್ಲೇ ಹೊಡೆದಾಡಿಕೊಳ್ಳುತ್ತಿದ್ದಾರೆ. ಬರ ಸಮಸ್ಯೆಗೆ ಪರಿಹಾರ ಹುಡುಕುವ ಬದಲು ಮುಂದಿನ ಸಿಎಂ ಯಾರು ಎಂಬ ಚರ್ಚೆಯಲ್ಲಿ ತೊಡಗಿದ್ದಾರೆ. ಸರ್ಕಾರ ಅಧಿಕಾರಕ್ಕೆ ಬಂದ ಆರು ತಿಂಗಳಲ್ಲೇ ಜನ ಬೇಸತ್ತಿದ್ದಾರೆ ಎಂದರು.