ಬೆಂಗಳೂರು : ವಿಧಾನಸಭಾ ಚುನಾವಣೆಗೂ ಮುನ್ನ ಸದ್ದು ಮಾಡಿದ್ದ ಚಿಲುಮೆ ಪ್ರಕರಣ ಈಗ ಮತ್ತೆ ಸುದ್ದಿಯಲ್ಲಿದೆ. ಚಿಲುಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ತುಷಾರ್ ಗಿರಿನಾಥ್ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಮೂಲಕ ಚಿಲುಮೆ ಉರುಳು ಬಿಬಿಎಂಪಿ ಆಯುಕ್ತರಿಗೆ ಸುತ್ತಿಕೊಂಡಂತಾಗಿದೆ.
ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ರಮೇಶ್ ಬಾಬು ಅವರು ಬರೆದಿರುವ ಪತ್ರದ ಆಧಾರದ ಮೇಲೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಚಿಲುಮೆ ಪ್ರಕರಣದಲ್ಲಿ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ವಿರುದ್ಧ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮುಖ್ಯ ಚುನಾವಣಾಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದ ಮೇರೆಗೆ ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿದುಬಂದಿದೆ.