
ಬೆಂಗಳೂರಿನಲ್ಲಿ (Bengaluru) ನಾಗರಿಕ ಸ್ನೇಹಿ ಸೇವೆ, ಉತ್ತಮ ಆಡಳಿತ, ಪರಿಣಾಮಕಾರಿಯಾಗಿ ಯೋಜನೆಗಳನ್ನು ಜಾರಿಗೊಳಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಜಾರಿಗೆ ತಂದು ಐದು ಪಾಲಿಕೆಗಳನ್ನು ಅಸ್ತಿತ್ವಕ್ಕೆ ತರಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ಹೇಳಿದ್ದಾರೆ.

02-09-2025ರಂದು ಬೆಂಗಳೂರು ಮಹಾನಗರದ ಪಾಲಿಗೆ ವಿಶೇಷವಾದ ದಿನ. ಈ ದಿನದಿಂದ ಬೆಂಗಳೂರಿನಲ್ಲಿ ಐದು ಪಾಲಿಕೆಗಳು ಅಸ್ತಿತ್ವಕ್ಕೆ ಬಂದಿವೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ, ಬೆಂಗಳೂರು ಉತ್ತರ ನಗರ ಪಾಲಿಕೆ, ಬೆಂಗಳೂರು ದಕ್ಷಿಣ ನಗರ ಪಾಲಿಕೆ, ಬೆಂಗಳೂರು ಪೂರ್ವ ನಗರ ಪಾಲಿಕೆ, ಬೆಂಗಳೂರು ದಕ್ಷಿಣ ನಗರ ಪಾಲಿಕೆಗಳನ್ನು ರಚಿಸಲಾಗಿದೆ. ಈ ಪಾಲಿಕೆಗಳನ್ನು ಬೆಂಗಳೂರಿನ ಹೆಸರಿನೊಂದಿಗೆ ರಚಿಸಲು ಕಾನೂನಿನಲ್ಲೇ ತಿಳಿಸಿದ್ದೇವೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ 26-08-2025ರಂದು ಗ್ರೇಟರ್ ಬೆಂಗಳೂರು ಆಡಳಿತ ಪ್ರಾಧಿಕಾರ ಸಮಿತಿ ರಚನೆಯಾಗಿದೆ. ಇದರಲ್ಲಿ 75 ಸದಸ್ಯರನ್ನು ನೇಮಕ ಮಾಡಲಾಗಿದೆ” ಎಂದು ಹೇಳಿದರು.

ಎಲ್ಲಾ ವಲಯಗಳಲ್ಲಿ ಆಯಾ ವ್ಯಾಪ್ತಿಯ ಅಧಿಕಾರಿಗಳನ್ನು ನೇಮಕ ಮಾಡಿದ್ದೇವೆ. ಪ್ರತಿ ಪಾಲಿಕೆಯಲ್ಲಿ ಆಡಳಿತಾಧಿಕಾರಿಗಳಾಗಿ ಆಯುಕ್ತರನ್ನು ನೇಮಕ ಮಾಡಲಾಗಿದೆ. ಆಯುಕ್ತರಿಗೆ ನೆರವಾಗಲು, ಹೆಚ್ಚುವರಿ ಆಯುಕ್ತರು, ಜಂಟಿ ಆಯುಕ್ತರು, ಕೆಎಎಸ್ ಅಧಿಕಾರಿಗಳು ಹಾಗೂ ಮುಖ್ಯ ಇಂಜಿನಿಯರ್ ಕಡ್ಡಾಯವಾಗಿ ಇರುತ್ತಾರೆ. ಈ ಹಿಂದೆ ಇದ್ದ 27 ವಿಭಾಗಗಳನ್ನು 50 ವಿಭಾಗಗಳಾಗಿ ಮಾಡಿದ್ದೇವೆ. 75 ಉಪ ವಿಭಾಗಗಳನ್ನು 150ಕ್ಕೆ ಏರಿಸಿದ್ದೇವೆ. ಪ್ರತಿ ಪಾಲಿಕೆಯಲ್ಲಿ ಗರಿಷ್ಠ 150 ವಾರ್ಡ್ ಗಳವರೆಗೆ ಅವಕಾಶ ಕಲ್ಪಿಸಲಾಗಿದೆ. ಪ್ರತಿ ಪಾಲಿಕೆಯಲ್ಲಿ ಸರಾಸರಿಯಲ್ಲಿ 100 ವಾರ್ಡ್ ಗಳಂತೆ ಬೆಂಗಳೂರಿನಲ್ಲಿ ಸುಮಾರು 500 ಹೊಸ ನಾಯಕರುಗಳನ್ನು ಆಯ್ಕೆ ಮಾಡುವ ಅವಕಾಶ ಕಲ್ಪಿಸಲಾಗಿದೆ. ಇದರಲ್ಲಿ ಮಹಿಳೆಯರು ಹಾಗೂ ಪುರುಷರು 50:50 ಇರುತ್ತಾರೆ” ಎಂದು ತಿಳಿಸಿದರು.

“ನಾಳೆಯಿಂದಲೇ ಆಯಾ ಪಾಲಿಕೆ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ತೆರಿಗೆ ಹಣ ಆಯಾ ಪಾಲಿಕೆಗೆ ಸೇರಲಿದೆ. ಈ ತೆರಿಗೆ ಹಣ ಜಿಬಿಎಗಾಗಲಿ ಅಥವಾ ರಾಜ್ಯ ಸರ್ಕಾರಕ್ಕಾಗಲಿ ಬರುವುದಿಲ್ಲ. ನಾವು ಯಾವುದೇ ರೀತಿಯಲ್ಲಿ ಸಂವಿಧಾನದ 74ನೇ ತಿದ್ದುಪಡಿಗೆ ಧಕ್ಕೆಯಾಗುವುದಿಲ್ಲ. ಪಾಲಿಕೆಗಳಿಗೆ ಸ್ವಾಯತ್ತತೆ ನೀಡಲಾಗಿದೆ. ಮುಂದೆ ಜಿಬಿಎ ಮೂಲಕ ದೊಡ್ಡ ದೊಡ್ಡ ಯೋಜನೆಗಳ ಜಾರಿ, ಉತ್ತಮ ಆಡಳಿತ, ಸೇವೆಗೆ ಮೀಸಲಾಗಿರಲಿದೆ. ಸರ್ಕಾರದಿಂದ ಬಂದ ಹಣ ಜಿಬಿಎ ಹಾಗೂ ಪಾಲಿಕೆಗಳಿಗೆ ಹೋಗಲಿದೆ. ಇನ್ನು ಮುಂದಿನ ದಿನಗಳಲ್ಲಿ ಕಾನೂನು ಚೌಕಟ್ಟಿನಲ್ಲಿ ಚುನಾವಣೆ ನಡೆಯಲಿದೆ.
ಸಧ್ಯ ನಗರದ ಜನಸಂಖ್ಯೆ 1.44 ಕೋಟಿ ಎಂದು ಅಂದಾಜಿಸಲಾಗಿದೆ. 2011ರ ಜನಗಣತಿ ಪ್ರಕಾರ ವಾರ್ಡ್ ನಲ್ಲಿ 20 ಸಾವಿರ ಜನಸಂಖ್ಯೆ ಇತ್ತು. ಈಗ 35-40 ಸಾವಿರ ಸರಾಸರಿಯಲ್ಲಿ ವಾರ್ಡ್ ರಚನೆ ಮಾಡಲಾಗುವುದು” ಎಂದು ವಿವರಿಸಿದರು.