ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಲಕ್ಷ್ಮಿ ಯೋಜನೆಯ ಭರ್ತಿ ಐದು ವರ್ಷಗಳ ಕಂತನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪರವಾಗಿ ಶಾಸಕ ದಿನೇಶ್ ಗೂಳಿಗೌಡ ಅವರು ತಾಯಿ ಚಾಮುಂಡೇಶ್ವರಿಗೆ ಸಮರ್ಪಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪರವಾಗಿ ಶಾಸಕ ದಿನೇಶ್ ಗೂಳಿಗೌಡ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ಹಣದ ಚೆಕ್ ಅನ್ನು ಅರ್ಪಿಸಿದ್ದಾರೆ.ಪ್ರತಿ ತಿಂಗಳಿಗೆ 2 ಸಾವಿರ ರೂ.ನಂತೆ 59 ತಿಂಗಳ ಕಂತಿನ ಹಣ ಒಟ್ಟು 1.18 ಲಕ್ಷ ರೂ.ಗಳನ್ನು ಸಚಿವೆ ಹೆಬ್ಬಾಳ್ಕರ್ ವೈಯಕ್ತಿಕವಾಗಿ ನೀಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಚುನಾವಣೆಗೂ ಮುನ್ನ ಕಾಂಗ್ರೆಸ್ ನಾಯಕರು ಚಾಮುಂಡಿ ದೇವಿ ಸನ್ನಿಧಿಯಲ್ಲಿ ಗ್ಯಾರಂಟಿ ಕಾರ್ಡ್ ಗಳನ್ನಿಟ್ಟು ಹರಕೆ ಕಟ್ಟಿದ್ದರು. ಅದರಂತೆ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳೊಂದಿಗೆ ಅಭೂತಪೂರ್ವ ಜಯಭೇರಿ ಬಾರಿಸಿ ಅಧಿಕಾರವನ್ನು ಹಿಡಿದಿದೆ. ಐದರಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದ ಯಜಮಾನಿಯರ ಖಾತೆಗೆ ಪ್ರತಿ ತಿಂಗಳು ಜಮಾ ಮಾಡುವ ತಲಾ 2 ಸಾವಿರ ರೂ.ಗಳ ಮೊದಲ ಕಂತನ್ನು ತಾಯಿ ಚಾಮುಂಡೇಶ್ವರಿ ದೇವಿಗೆ ಅಂದು ಸಮರ್ಪಣೆ ಮಾಡಿದ್ದೆವು ಎಂದು ಹೆಬಾಳ್ಕರ್ ಹೇಳಿಕೆಯಲ್ಲಿ ವಿವರಿಸಿದ್ದಾರೆ.
![](https://pratidhvani.com/wp-content/uploads/2023/11/vijay-karnataka-105550389.jpg)
ಮೊದಲ ಕಂತನ್ನು ಸಿಎಂ, ಡಿಸಿಎಂ ಹಾಗೂ ನಾನು ತಾಯಿ ಚಾಮುಂಡೇಶ್ವರಿ ದೇವಿಗೆ ಅರ್ಪಿಸಿದ್ದೇವೆ. ಹಾಗಾಗಿ ಉಳಿದ 59 ತಿಂಗಳ ಹಣವನ್ನು ದೇವಿಗೆ ನಾನು ವೈಯಕ್ತಿಕವಾಗಿ ಸಲ್ಲಿಸುತ್ತಿದ್ದೇನೆ. ಈ ಮೊತ್ತವನ್ನು ಶಾಸಕರಾದ ದಿನೇಶ್ ಗೂಳಿಗೌಡ ಅವರ ಮೂಲಕ ಸಮರ್ಪಿಸುತ್ತಿದ್ದೇನೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.