ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಆ ಹುದ್ದೆಯಲ್ಲಿ ಮುಂದುವರಿಯುವ ಯಾವುದೇ ನೈತಿಕ ಹಕ್ಕು ಅವರಿಗಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿಚಾರವಾಗಿ ಕೇಂದ್ರ ಚುನಾವಣಾ ಆಯೋಗದ ಆಂತರಿಕ ಭಿನ್ನಾಭಿಪ್ರಾಯ ಬಹಿರಂಗಗೊಂಡ ಬೆನ್ನಲ್ಲೇ, ಖರ್ಗೆ ಅವರು ಸಿಇಸಿ ಅವರ ರಾಜೀನಾಮೆಗೆ ಆಗ್ರಹಿಸಿ ಚುನಾವಣಾ ಆಯೋಗದ ಮುಂದೆ ಐದು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮತದಾರರ ಪಟ್ಟಿಯಲ್ಲಿ ನಡೆದಿರುವ ಪ್ರಮುಖ ಬದಲಾವಣೆಗಳ ದತ್ತಾಂಶವನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಬೇಕು ಮತ್ತು ಪಟ್ಟಿಯಿಂದ ಹೆಸರು ಕೈಬಿಡಲಾದ ಮತದಾರರಿಗೆ ಮುಂಚಿತವಾಗಿ ಮಾಹಿತಿ ನೀಡಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು. ಇದರೊಂದಿಗೆ ರಾಜಕೀಯ ಪಕ್ಷಗಳಿಗೆ ಮತದಾರರ ಪಟ್ಟಿಯ ಮಾಹಿತಿಯನ್ನು ಸರಳ ಮಾದರಿಯಲ್ಲಿ ಸಕಾಲದಲ್ಲಿ ಒದಗಿಸಬೇಕು, ಗಂಭೀರ ದೋಷಗಳ ಕುರಿತು ಸ್ವತಂತ್ರ ಹಾಗೂ ಕಾಲಮಿತಿಯ ತನಿಖೆ ನಡೆಸಬೇಕು ಮತ್ತು ಚುನಾವಣೆ ಸಂಬಂಧಿತ ನಿರ್ಧಾರಗಳಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ಆಗ್ರಹಿಸಿದರು. ಪಿತೂರಿಯ ಮೂಲಕ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗುತ್ತಿದ್ದು, ಇದು ಅರ್ಹ ಮತದಾರರ ಹಕ್ಕುಗಳನ್ನು ಕಸಿಯುವ ಹುನ್ನಾರವಾಗಿದೆ ಎಂದು ಅವರು ಆರೋಪಿಸಿದರು.

ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಕಳೆದ ಹತ್ತು ತಿಂಗಳುಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಹೊಸ ಮತದಾರರ ನೋಂದಣಿಗೆ ಬಳಸುವ ಫಾರ್ಮ್-6 ನಲ್ಲಿನ ಬದಲಾವಣೆಗಳ ಕುರಿತು ಹದಿನಾಲ್ಕು ಬಾರಿ ಆಕ್ಷೇಪ ವ್ಯಕ್ತಪಡಿಸಿರುವ ಮಾಧ್ಯಮ ವರದಿಯನ್ನು ಖರ್ಗೆ ಈ ಸಂದರ್ಭದಲ್ಲಿ ಉಲ್ಲೇಖಿಸಿದರು. ಸ್ವತಃ ಇಬ್ಬರು ಚುನಾವಣಾ ಆಯುಕ್ತರೇ ಸಿಇಸಿ ಅವರ ನಡವಳಿಕೆಯನ್ನು ಸರ್ವಾಧಿಕಾರಿ ಮತ್ತು ನಿಯಮಬಾಹಿರ ಎಂದು ಕರೆದಿದ್ದಾರೆ ಎಂದು ಅವರು ಹೇಳಿದರು. ಆಯೋಗದ ಆಂತರಿಕ ಪೋರ್ಟಲ್‌ನಿಂದ ಇಬ್ಬರು ಆಯುಕ್ತರನ್ನು ಹೊರಗಿಟ್ಟು ರಹಸ್ಯ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತಿದೆಯೇ ಎಂದು ಅವರು ಪ್ರಶ್ನಿಸಿದರು.
ಈ ಆರೋಪಗಳನ್ನು ತಳ್ಳಿಹಾಕಿರುವ ಚುನಾವಣಾ ಆಯೋಗವು, ಅಭಿಪ್ರಾಯ ಭೇದಗಳು ಸಹಜ ಚರ್ಚೆಯ ಭಾಗವಾಗಿದ್ದು, ಪರಿಷ್ಕರಣೆ ಕುರಿತ ಎಲ್ಲ ನಿರ್ಧಾರಗಳನ್ನು ಸರ್ವಾನುಮತದಿಂದಲೇ ತೆಗೆದುಕೊಳ್ಳಲಾಗಿದೆ ಎಂದು ಸ್ಪಷ್ಟನೆ ನೀಡಿದೆ. ಇದಕ್ಕೆ ಪ್ರತಿಕ್ರಿಯಿಸಿದ ಖರ್ಗೆ, ಈ ಹೋರಾಟವು ಚುನಾವಣಾ ಆಯೋಗವನ್ನು ದುರ್ಬಲಗೊಳಿಸುವುದಕ್ಕಾಗಿ ಅಲ್ಲ, ಬದಲಾಗಿ ಸಾಂವಿಧಾನಿಕ ಸಂಸ್ಥೆಯ ವಿಶ್ವಾಸಾರ್ಹತೆಯನ್ನು ಉಳಿಸಿಕೊಳ್ಳುವುದಾಗಿದೆ ಎಂದರು. ಬೆಂಗಳೂರಿನ ಮಹದೇವಪುರ, ಆಳಂದ, ಹರಿಯಾಣ ಮತ್ತು ಮಹಾರಾಷ್ಟ್ರಗಳಲ್ಲಿನ ಮತದಾರರ ಪಟ್ಟಿ ಅಕ್ರಮಗಳ ಕುರಿತು ರಾಹುಲ್ ಗಾಂಧಿ ಈ ಹಿಂದೆ ವ್ಯಕ್ತಪಡಿಸಿದ್ದ ಕಳವಳಗಳನ್ನು ಬೆಂಬಲಿಸಿದ ಅವರು, ಸರ್ಕಾರಗಳು ಬದಲಾಗಬಹುದು ಆದರೆ ಪ್ರಜಾಪ್ರಭುತ್ವ ಮತ್ತು ಮತದಾರರ ಹಕ್ಕುಗಳು ಸದಾ ರಕ್ಷಿಸಲ್ಪಡಬೇಕು ಎಂದು ಪ್ರತಿಪಾದಿಸಿದರು.






