ಹಾಸನ ಲೋಕಸಭಾ ಚುನಾವಣೆಗೂ ಮುನ್ನ ದಿನ ಹಾಸನದಲ್ಲಿ ಅಲ್ಚಲ್ ಸೃಷ್ಟಿಸಿದ ಅಶ್ಲೀಲ ವಿಡಿಯೋಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ವಿಡಿಯೋ ಎನ್ನಲಾಗ್ತಿದ್ದು, ಮಹಿಳಾ ಆಯೋಗ ತನಿಖೆ ಮಾಡುವಂತೆ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯ ಮಾಡಿತ್ತು. ಇದೀಗ ADGP BK ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ.

ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. SIT (Special Investigation Team) ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸುವ ತೀರ್ಮಾನ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಚುನಾವಣೆ ನಡೆದ ಕೂಡಲೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಏಪ್ರಿಲ್ 27ರ ಮುಂಜಾನೆ 3 ಗಂಟೆಗೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ವಿದೇಶಕ್ಕೆ ಹಾರಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಅಶ್ಲೀಲ ವಿಡಿಯೋ ತುಣುಕುಗಳಲ್ಲಿ ಕಾಣಿಸಿಕೊಂಡಿರುವುದು ಪ್ರಜ್ವಲ್ ರೇವಣ್ಣ ಅನ್ನೋ ಆರೋಪದ ನಡುವೆ ಪ್ರಜ್ವಲ್ ರೇವಣ್ಣ ಪರಾರಿ ಆಗಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

ಲೋಕಸಭಾ ಚುನಾವಣೆ ಹೊತ್ತಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಕುಟುಂಬಕ್ಕೆ ತನಿಖೆಯ ಬಿಸಿ ತಟ್ಟಿದೆ. ಇಂದು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಲಿದೆ ಎನ್ನಲಾಗ್ತಿದೆ. ಲುಫ್ತಾನ್ಸಾ (Lufthansa Airlines) LH 755 ವಿಮಾನದಲ್ಲಿ ಪ್ರಯಾಣ ಮಾಡಿದ್ದಾರೆ ಎನ್ನಲಾಗಿದೆ. KIAL ಜರ್ಮನಿಯ ಫ್ರಾಂಕ್ ಫರ್ಟ್ ವಿಮಾನ ನಿಲ್ದಾಣಕ್ಕೆ ಪ್ರಯಾಣ ಮಾಡಲಾಗಿದೆ. ಅಲ್ಲಿಂದ ಮುಂದೆ ಎಲ್ಲಿಗೆ ಹೋಗಿದ್ದಾರೋ ತಿಳಿಯದಾಗಿದೆ. ಆದರೆ ತನಿಖೆಯ ಬಿಸಿ ಗೌಡರ ಕುಟುಂಬಕ್ಕೆ ಕಪ್ಪು ಚುಕ್ಕೆ ಆದಂತೆ ಕಾಣಿಸುತ್ತಿದೆ.