ಬೀದರ್: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಕರ್ತವ್ಯದ ವೇಳೆ ತುಮಕೂರಿನಲ್ಲಿ ವಿಎಒ ಭುವನಾ ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಬ್ಬ ಅಧಿಕಾರಿ ಎಸ್‌ಐಆರ್ ಕರ್ತವ್ಯದ ವೇಳೆ ಮೃತಪಟ್ಟಿದ್ದಾರೆ.

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕರ್ತವ್ಯದಲ್ಲಿದ್ದ ಬಿಎಲ್‌ಒ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೀದರ್ ತಾಲೂಕಿನ ಅಮಲಾಪುರ ಗ್ರಾಮದಲ್ಲಿ ನಡೆದಿದೆ. ಭಾಲ್ಕಿ ಮೂಲದ ಸುನೀಲ್ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ಅಮಲಾಪುರ ಗ್ರಾಮದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಸರ್ವೇ ನಡೆಸುತ್ತಿದ್ದ ವೇಳೆ ಸುನೀಲ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳದಲ್ಲಿದ್ದವರು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಹೃದಯಾಘಾತದಿಂದ ಸುನೀಲ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಗಾಂಧಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನು ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಆರಂಭವಾದ ದಿನದಿಂದ ಬಿಎಲ್‌ಒಗಳಿಗೆ ಮಾನಸಿಕ ಒತ್ತಡ ಹೆಚ್ಚಾಗುತ್ತಿದೆ ಎನ್ನುವ ಆರೋಪ ಕೇಳಿ ಬರುತ್ತಿದ್ದು, ಚುನಾವಣಾ ಅಧಿಕಾರಿಗಳು ಕೂಡಲೇ ಈ ಬಗ್ಗೆ ಗಮನ ಹರಿಸುವಂತೆ ಒತ್ತಾಯಿಸಿದ್ದಾರೆ.






