ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿದ್ದು, ಸಾಕಷ್ಟು ಅವಾಂತರಗಳನ್ನೇ ಸೃಷ್ಟಿಸಿದೆ.
ಇಂದು ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಸೋಮವಾರ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಹಲವೆಡೆ ಮಳೆಯಿಂದಾಗಿ ಭಾರೀ ಅವಾಂತರಗಳೇ ಸೃಷ್ಟಿಯಾಗಿವೆ. ಬೆಳಗಾವಿ, ಹಾವೇರಿ, ಚಿಕ್ಕಮಗಳೂರು, ಬೀದರ್, ಕಲಬುರಗಿ ಜಿಲ್ಲೆಯ ಹಲವೆಡೆ ಭರ್ಜರಿ ಮಳೆಯಾಗಿದೆ. ಮಳೆಗೆ ಮೂವರು ಬಲಿಯಾಗಿದ್ದಾರೆ. ಹಲವೆಡೆ ವಿದ್ಯುತ್ ಕಂಬಗಳು ಧರೆಗೆ ಉರುಳಿವೆ. ಜನ – ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ.
ಸೋಮವಾರ ಹಲವೆಡೆ ಬಿಸಿಲಿನ ಶಾಖ ಜನರನ್ನು ಹೈರಾಣ ಮಾಡಿತ್ತು. ರಾಯಚೂರಿನಲ್ಲಿ 41.0 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. ಬೀದರ್ ಜಿಲ್ಲೆಯ ನಿಟ್ಟೂರು (ಬಿ) ಗ್ರಾಮದಲ್ಲಿ ತಾಯಿಯ ಎದುರೇ ಮಗ ಸಿಡಿಲಿಗೆ ಬಲಿಯಾಗಿದ್ದಾನೆ. ಸುನೀಲ್ ವಿಜಯಕುಮಾರ್ ಮಗರೆ (32) ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಸಾವನ್ನಪ್ಪಿದ್ದಾನೆ. ಯುವಕನ ಪಕ್ಕದಲ್ಲಿಯೇ ತಾಯಿ, ಅಣ್ಣ, ಚಿಕ್ಕಪ್ಪ ಇದ್ದರು. ಆದರೆ, ಅವರೆಲ್ಲ ಸಿಡಿಲಿನಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ದೇವಂತಗಿ ಗ್ರಾಮದಲ್ಲಿ ಸಿಡಿಲಿಗೆ ಬಾಲಕ ಬಲಿಯಾಗಿದ್ದಾನೆ. ಚಂದ್ರಕಾಂತ್ ಭಜಂತ್ರಿ (12) ಜಮೀನಿನಿಂದ ಮನೆಗೆ ಮರಳಿ ಹೋಗುತ್ತಿದ್ದ ಸಂದರ್ಭದಲ್ಲಿ ಸಿಡಿಲಿಗೆ ಬಲಿಯಾಗಿದ್ದಾನೆ. ಕೊಪ್ಪಳದ ಯಲಬುರ್ಗಾ ತಾಲೂಕಿನ ಕೋನಸಾಗರ ಗ್ರಾಮದಲ್ಲಿ ಶ್ರೀನಿವಾಸ ಗೊಲ್ಲರ (16) ಕುರಿ ಮೇಯಿಸುತ್ತಿದ್ದಾಗ ಸಿಡಿಲಿಗೆ ಬಲಿಯಾಗಿದ್ದಾನೆ. ಇರಕಲ್‍ಗಡದಲ್ಲಿ ಎತ್ತು ಹಾಗೂ 7 ಕುರಿಗಳು ಸಿಡಿಲಿಗೆ ಬಲಿಯಾಗಿವೆ.
ಚಿಕ್ಕಮಗಳೂರಿನ ಲಿಂಗದಹಳ್ಳಿಯಲ್ಲಿ ಕಾರಿನ ಮೇಲೆ ತೆಂಗಿನಮರ ಹಾಗೂ ವಿದ್ಯುತ್ ಕಂಬ ಬಿದ್ದು, ಕಾರಿನ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.