ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ಚಂಡಮಾರುತ ಭೀತಿ ಇರುವುದರಿಂದ ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಲ್ಲಿ ಮುಂದಿನ ೩ ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಕರ್ನಾಟಕ, ತಮಿಳುನಾಡು ಹಾಗೂ ಕೇರಳದಲ್ಲಿ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ನಂತರ ಕಡಿಮೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಗುರುವಾರ ನೀಡಿದ ಪ್ರಕಟಣೆಯಲ್ಲಿ ಎಚ್ಚರಿಸಿದೆ.
ಆಗಸ್ಟ್ 6ರಿಂದ ಚಂಡಮಾರುತ ದಿಕ್ಕು ಬದಲಿಸುವುದರಿಂದ ಗುಜರಾತ್, ಪೂರ್ವ ರಾಜಸ್ಥಾನ, ಮಹಾರಾಷ್ಟ್ರ, ಗೋವಾ, ತೆಲಂಗಾಣ, ಛತ್ತೀಸ್ಗಢ, ಮಧ್ಯಪ್ರದೇಶ ಮತ್ತು ಒಡಿಶಾದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.
ಕೇರಳದ ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಈಗಾಗಲೇ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೊಲ್ಲಂ, ಮಲಪ್ಪುರಂ, ಕೋಯಿಕ್ಕೋಡ್, ವಯನಾಡು ಮತ್ತು ಕಾಸರಗೋಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕೇರಳದಲ್ಲಿ ಎಡಬಿಡದೆ ಮಳೆ ಸುರಿಯುತ್ತಿರುವುದರಿಂದಾಗಿ ಪೆರಿಂಗಲ್ಕುತ್ತು ಅಣೆಕಟ್ಟಿನ ನಾಲ್ಕನೇ ಷಟರ್ ಅನ್ನು ತೆರೆಯಲಾಗಿದೆ. ಇದರಿಂದ ಚಾಲಕುಡಿ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ಅಧಿಕಾರಿಗಳು ನದಿ ತೀರದಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿದ್ದಾರೆ.
ಪ್ರತಿಕೂಲ ಹವಾಮಾನದ ಕಾರಣದಿಂದ ಅಲಪ್ಪುಳ, ಇಡುಕ್ಕಿ, ಪತ್ತನಂತಿಟ್ಟ, ಎರ್ನಾಕುಲಂ ಮತ್ತು ಕೊಟ್ಟಾಯಂನಲ್ಲಿ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಲಾಗಿದೆ. ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಭೂಕುಸಿತ ಪೀಡಿತ ಎತ್ತರದ ಶ್ರೇಣಿಗಳು, ನದಿ ದಡಗಳು, ತಗ್ಗು ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಿದೆ. ಆಗಸ್ಟ್ 4 ರವರೆಗೆ ಅಲೆಗಳು 3.3 ಮೀಟರ್ ಎತ್ತರಕ್ಕೇರುವ ಸಾಧ್ಯತೆಯಿರುವುದರಿಂದ ನದಿ ತೀರಗಳಲ್ಲಿ ರಾತ್ರಿ ಪ್ರಯಾಣ ಮಾಡದಂತೆ ಮತ್ತು ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.