ರಾಜ್ಯದಲ್ಲಿ ಬಿಡುವು ನೀಡುವ ಸೂಚನೆ ನೀಡಿದ್ದ ಮಳೆರಾಯ ಮತ್ತೆ ಸೆಪ್ಟೆಂಬರ್ 11ರವರೆಗೆ ಕಾಟ ಕೊಡಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಪರಿಹಾರ ಕಾರ್ಯಕ್ಕೂ ಅಡ್ಡಿಯುಂಟಾಗಿದ್ದು, ಬಿಡುವು ನೀಡದ ಸುರಿದ ಮಳೆ ರಾಜ್ಯ ಸರಕಾರಕ್ಕೆ ದೊಡ್ಡ ತಲೆನೋವಾಗಿದೆ.
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲ ಭಾಗದಲ್ಲೂ ಮುಂದಿನ 4 ದಿನ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ನಾಳೆಯಿಂದ ಕರಾವಳಿಯ ಮೂರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಲಾಗಿದ್ದು, ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸುಮಾರು 20 ಸೆಂ. ಮೀ.ಗಿಂತ ಹೆಚ್ಚು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮಲೆನಾಡು ಭಾಗದಲ್ಲಿ, ಕೊಡಗು ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ, ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ರಾಯಚೂರು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ನೀಡಲಾಗಿದ್ದು, ಈ ಪ್ರದೇಶಗಳಲ್ಲಿ ಗುಡುಗು ಸಹಿತ ಅಬ್ಬರ ಮಳೆ ಸುರಿಯಲಿದೆ.
ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಇಂದಿನಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬೀದರ್, ರಾಯಚೂರು, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಸೆ. 11ರವರೆಗೆ ಭಾರೀ ಮಳೆಯಾಗಲಿದ್ದು, ‘ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.