ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್ ಶಾಕ್ ನೀಡಿದ್ದು, ವಿಚಾರಣಾಧೀನ ನ್ಯಾಯಾಲಯ ಸಂಜ್ಞೆ ಪರಿಗಣಿಸಿರುವುದು ಮತ್ತು ಸಮನ್ಸ್ ಜಾರಿ ಮಾಡಿರುವುದನ್ನು ಹೈಕೋರ್ಟ್ ಎತ್ತಿ ಹಿಡಿದೆ.

ಪೋಕ್ಸೋ ಪ್ರಕರಣದಲ್ಲಿ ಸಂಜ್ಞೆ ಪರಿಗಣಿಸಿರುವುದನ್ನು ರದ್ದುಪಡಿಸುವಂತೆ ಕೋರಿ ಬಿ.ಎಸ್ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯನ್ನು ಕೆಲ ತಿಂಗಳುಗಳಿಂದ ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಿ ತೀರ್ಪನ್ನು ಮುಂದೂಡಿತ್ತು. ಇಂದು ನ್ಯಾಯಮೂರ್ತಿ ಎಂ.ಐ ಅರುಣ್ ಅವರಿದ್ದ ಏಕಸದಸ್ಯ ಪೀಠವು ವಿಚಾರಣಾಧೀನ ನ್ಯಾಯಾಲಯ ಸಂಜ್ಞೇ ಪರಿಗಣಿಸಿರುವುದು ಮತ್ತು ಸಮನ್ಸ್ ಜಾರಿ ಮಾಡಿರುವುದನ್ನು ಸರಿ ಎಂದು ಆದೇಶಿಸಿದೆ.

ಈ ಹಿನ್ನೆಲೆಯಲ್ಲಿ ಬಿ.ಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಸಿಐಡಿ ವಿಚಾರಣೆಯಲ್ಲಿ ಮುಂದುವರೆಯಲಿದೆ. ಇನ್ನು ವಿಚಾರಣೆಗೆ ಯಡಿಯೂರಪ್ಪ ಅವರ ಉಪಸ್ಥಿತಿ ಅಗತ್ಯವಿಲ್ಲದಿದ್ದರೆ, ಅವರ ಪರ ವಿನಾಯಿತಿ ಮನವಿಯನ್ನು ಪುರಸ್ಕರಿಸುವಂತೆ ನ್ಯಾಯಾಲಯ ಸೂಚಿಸಿದೆ ಎಂದು ವರದಿಯಾಗಿದೆ.


