ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಇಂಧನ ಸಚಿವ ಕೆ.ಜೆ.ಜಾರ್ಜ್ ಮತ್ತು ಇತರ ಹಿರಿಯ ಅಧಿಕಾರಿಗಳ ವಿರುದ್ಧ ಸಲ್ಲಿಕೆಯಾಗಿರುವ ದೂರಿಗೆ ಸಂಬಂಧಿಸಿದಂತೆ ವಸ್ತುಸ್ಥಿತಿ ವರದಿ ಸಲ್ಲಿಸಲು ಜನಪ್ರತಿಧಿಗಳ ವಿಶೇಷ ನ್ಯಾಯಾಲಯವು ಲೋಕಾಯುಕ್ತ ಪೊಲೀಸರಿಗೆ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಅಧೀನ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಚಿವ ಕೆ.ಜೆ.ಜಾರ್ಜ್ ಮತ್ತಿತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ ಅರುಣ್ ಅವರ ಏಕಸದಸ್ಯ ಪೀಠವು, ಖಾಸಗಿ ದೂರು ದಾಖಲಿಸಲು ಕಚೇರಿಗೆ ನಿರ್ದೇಶಿಸಿರುವುದು ಮತ್ತು ಸ್ಮಾರ್ಟ್ ಮೀಟರ್ ಅಳವಡಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶಕ್ಕೆ ಬುಧವಾರ ತಡೆನೀಡಿ, ವಿಚಾರಣೆಯನ್ನು ಆಗಸ್ಟ್ 20ಕ್ಕೆ ಮುಂದೂಡಿದೆ.

ವಿಚಾರಣೆ ಆರಂಭಕ್ಕೂ ಮುನ್ನ ಪೀಠವು, “ಒಂದು ರಾಜಕೀಯ ಪಕ್ಷದ ವಿರುದ್ಧ ಮತ್ತೊಂದು ರಾಜಕೀಯ ಪಕ್ಷವು ಕ್ರಿಮಿನಲ್ ಪ್ರಕರಣ ದಾಖಲಿಸುವ ಸಂಸ್ಕೃತಿ ತಮಿಳುನಾಡಿನಲ್ಲಿ ಇದ್ಧಂತೆ ಕಾಣುತ್ತದೆ. ಈಗ ನಮ್ಮ ರಾಜ್ಯವೂ ಅದನ್ನು ನಕಲು ಮಾಡಿದಂತಿದೆ. ಒಂದು ಬಾರಿ ಇವರು, ಇನ್ನೊಂದು ಬಾರಿ ಅವರು ಅಧಿಕಾರದಲ್ಲಿರುತ್ತಾರೆ” ಎಂದು ಲಘು ದಾಟಿಯಲ್ಲಿ ಹೇಳಿತು.

ಪ್ರಕರಣದ ಹಿನ್ನೆಲೆ: ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಸಂಬಂಧಿಸಿದ ಟೆಂಡರ್ ಕಾನೂನು ಬಾಹಿರವಾಗಿದೆ ಎಂದು ಆರೋಪಿಸಿ ಬಿಜೆಪಿಯ ಶಾಸಕರೂ ಆದ ಡಾ.ಸಿ ಎನ್ ಅಶ್ವತ್ಥ ನಾರಾಯಣ, ಎಸ್ ಆರ್ ವಿಶ್ವನಾಥ್ ಮತ್ತು ಧೀರಜ್ ಮುನಿರಾಜು ಅವರು ವಿಚಾರಣಾಧೀನ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು.










