ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯಗಳ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸಲಹೆ ನೀಡಿದ ಮುಖ್ಯಮಂತ್ರಿಗಳು ಅರಿವು ಸಾಲ ಯೋಜನೆಯಡಿ ವೈದ್ಯಕೀಯ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ನೀಡುವ ಸಾಲದ ಮೊತ್ತ ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ವಸತಿ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಮುಖ್ಯಮಂತ್ರಿ, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಸಂಖ್ಯೆ ಹೆಚ್ಚಳ ಹಾಗೂ ವಿದ್ಯಾರ್ಥಿಗಳ ಪ್ರವೇಶಾತಿ ಪ್ರಮಾಣ ಹೆಚ್ಚಳ ಮಾಡಿರುವುದಕ್ಕೆ ಅನುಗುಣವಾಗಿ ಹೆಚ್ಚುವರಿ ಹುದ್ದೆಗಳ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ನಿಗದಿತ ಗುರಿಗೆ ಎದುರಾಗಿ ನಿರೀಕ್ಷೆಗೂ ಮೀರಿ ಅರ್ಜಿಗಳು ಸ್ವೀಕೃತವಾಗಿರುವುದರಿಂದ ಅರ್ಹ ಫಲಾನುಭವಿಗಳ ಜ್ಯೇಷ್ಠತಾ ಪಟ್ಟಿ ಸಿದ್ಧಪಡಿಸಿ, ಅನುದಾನ ಲಭ್ಯತೆಗೆ ಅನುಸಾರವಾಗಿ ಸೌಲಭ್ಯ ವಿತರಿಸುವಂತೆ ಸೂಚಿಸಿದರು.