ಯಾವುದೇ ಜಾತಿ, ಧರ್ಮ, ಭಾಷೆಯನ್ನು ಪರಿಗಣಿಸದೆ ನಾಡಿನ ಪ್ರತಿ ಮನೆಯ ಯಜಮಾನಿಗೆ ಮಾಸಿಕ ರೂ. 2,000 ಸಹಾಯಧನವನ್ನು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸಂಪುಟ ಸಭೆಯು ಅನುಮೋದನೆ ನೀಡಿದೆ.
ಬಿಪಿಎಲ್ ಅಥವಾ ಎಪಿಎಲ್ ಕುಟುಂಬದ ಮಹಿಳೆಯು ತಮ್ಮ ಬ್ಯಾಂಕ್ ಖಾತೆಯ ಮಾಹಿತಿ ಹಾಗೂ ಆಧಾರ್ ಕಾರ್ಡ್‌ನ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಿ, ತನ್ನನ್ನು ಮನೆಯ ಯಜಮಾನಿ ಎಂದು ಘೋಷಿಸಿಕೊಳ್ಳಬೇಕು. ಜೂನ್ 15 ರಿಂದ ಜುಲೈ 15ರ ವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶವಿದ್ದು, ಅರ್ಜಿಗಳ ಪರಿಶೀಲನೆ ಹಾಗೂ ತಂತ್ರಾಂಶ ಅಭಿವೃದ್ಧಿಪಡಿಸಿ ಆಗಸ್ಟ್ 15ರ ಸ್ವಾತಂತ್ರ್ಯ ದಿನದಂದು ಯೋಜನೆಗೆ ಚಾಲನೆ ನೀಡಲಾಗುವುದು. ಕುಟುಂಬ ನಿರ್ವಹಣೆಯ ಹೊಣೆಹೊತ್ತ ಮನೆಯ ಯಜಮಾನಿಗೆ ಆರ್ಥಿಕ ನೆರವು ನೀಡಿ, ಅವರ ಕಷ್ಟಗಳಿಗೆ ಹೆಗಲಾಗಿ ನಿಲ್ಲಲು ಸರ್ಕಾರ ಬದ್ಧವಾಗಿದೆ.