
ಬೆಂಗಳೂರು: ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಇಂದು ಅಧಿಕೃತ ತೆರೆ ಬಿದ್ದಿದೆ. ಹೂಡಿಕೆ ಸಮಾವೇಶದಲ್ಲಿ ರಾಜ್ಯಕ್ಕೆ ₹10, 27, 378 ಲಕ್ಷ ಕೋಟಿ ರೂಪಾಯಿ ಬಂಡವಾಳ ಹರಿದು ಬಂದಿದೆ. ಹಾಗು ರಾಜ್ಯದಲ್ಲಿ 6 ಲಕ್ಷ ಉದ್ಯೋಗ ಸೃಷ್ಟಿ ಆಗುವುದೂ ಖಾತ್ರಿಯಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಶುಕ್ರವಾರ ಹೇಳಿದ್ದಾರೆ.

ಸಮಾವೇಶಕ್ಕೆ ತೆರೆ ಬಿದ್ದ ಬಳಿಕ ಸಚಿವ ಎಂ.ಬಿ ಪಾಟೀಲ್ ಹಾಗು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಜಂಟಿ ಸುದ್ದಿಗೋಷ್ಟಿ ನಡೆಸಿದ್ರು. ಹೂಡಿಕೆದಾರರ ಸಮಾವೇಶದ ಸಾಧನೆಗಳ ಬಗ್ಗೆ ಮಾತನಾಡಿದ ಸಚಿವರು, ಕೆಲವು ಪ್ರತಿಷ್ಠಿತ ಕಂಪನಿಗಳು ಭಾರೀ ಹೂಡಿಕೆಗೆ ಆಸಕ್ತಿ ತೋರಿದ್ದು, ಒಡಂಬಡಿಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ಇವು ಆಖೈರಾದರೆ ಸಮಾವೇಶದ ಮೂಲಕ ಬರಲಿರುವ ಬಂಡವಾಳದ ಮೊತ್ತ ಇನ್ನೂ ಗಮನಾರ್ಹವಾಗಿ ಏರಲಿದೆ. ಈಗ ಖಾತ್ರಿಯಾಗಿರುವ ಹೂಡಿಕೆಯಲ್ಲಿ ಶೇಕಡ 75ರಷ್ಟು ಬೆಂಗಳೂರಿನ ಹೊರಗಿನ ಪ್ರದೇಶಗಳಿಗೆ ಹೋಗಲಿದ್ದು, ಶೇಕಡ 45ರಷ್ಟು ಬಂಡವಾಳವು ಉತ್ತರ ಕರ್ನಾಟಕದ ಪ್ರದೇಶಗಳಿಗೆ ಹರಿಯಲಿದೆ ಎಂದಿದ್ದಾರೆ.
ಬಂಡವಾಳ ಹೂಡಿಕೆಯಿಂದ 6 ಲಕ್ಷ ಉದ್ಯೋಗಗಳು ಸೃಷ್ಟಿಯಾಗಲಿದೆ. ತಯಾರಿಕೆ ಮತ್ತು ಇಂಧನ ಉತ್ಪಾದನೆ ಕ್ಷೇತ್ರಕ್ಕೆ ಸೇರಿವೆ. ಹೂಡಿಕೆಗಳಲ್ಲಿ ಜಿಂದಾಲ್ ಸಮೂಹವು ಇಂಧನ, ಸಿಮೆಂಟ್, ಉಕ್ಕು ಮತ್ತು ಪೂರಕ ಉದ್ಯಮಗಳಲ್ಲಿ 1.2 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡುತ್ತಿದೆ. ಬಲ್ದೋಟಾ ಸಮೂಹವು ಕೊಪ್ಪಳದಲ್ಲಿ 54 ಸಾವಿರ ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಕೊಪ್ಪಳದಲ್ಲಿ ಉಕ್ಕು ತಯಾರಿಕಾ ಘಟಕವನ್ನು ಸ್ಥಾಪಿಸುತ್ತಿದೆ. ಲ್ಯಾಮ್ ರೀಸರ್ಚ್ ಕಂಪನಿ ತಯಾರಿಕೆ ಮತ್ತು ಸಂಶೋಧನೆಗೆ 10 ಸಾವಿರ ಕೋಟಿ ರೂಪಾಯಿ ಬೃಹತ್ ಬಂಡವಾಳ ತೊಡಗಿಸುತ್ತಿದೆ ಎಂದಿದ್ದಾರೆ.
ಸ್ನೀಡರ್ ಎಲೆಕ್ಟ್ರಿಕ್ ಸಂಸ್ಥೆಯು ವಿದ್ಯುತ್ ಸಾಧನಗಳ ತಯಾರಿಕೆ ಮತ್ತು ಸಂಶೋಧನೆಗೆ 2,247 ಕೋಟಿ ರೂಪಾಯಿ, ವೋಲ್ವೊ ಕಂಪನಿಯು ವಿದ್ಯುಚ್ಚಾಲಿತ ಬಸ್ ಹಾಗು ಟ್ರಕ್ ತಯಾರಿಕೆಗೆ 1,400 ಕೋಟಿ ರೂಪಾಯಿ ಜೂಡಿಕೆ ಮಾಡ್ತಿದ್ದು, ಹೋಂಡಾ ಕಂಪನಿಯು ಇ.ವಿ. ವಾಹನಗಳ ತಯಾರಿಕೆಗೆ 600 ಕೋಟಿ ರೂಪಾಯಿ ಮತ್ತು ಸ್ಯಾಫ್ರಾನ್ ಕಂಪನಿಯು ಏವಿಯಾನಿಕ್ಸ್ ಉತ್ಪಾದನೆಗೆ 225 ಕೋಟಿ ರೂಪಾಯಿ ಹೂಡುತ್ತಿವೆ ಎಂದಿದ್ದಾರೆ. 2025-30ರವರೆಗಿನ ನೂತನ ಕೈಗಾರಿಕಾ ನೀತಿ ಅಡಿ ಒಟ್ಟಾರೆಯಾಗಿ 20 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಇಟ್ಟುಕೊಳ್ಳಲಾಗಿದೆ ಎಂದಿದ್ದಾರೆ.

ಹೊಸ ನೀತಿಯಡಿಯಲ್ಲಿ ತುಮಕೂರು ಮತ್ತು ವಿಜಯಪುರದಲ್ಲಿ ಕೈಗಾರಿಕಾ ಪಾರ್ಕ್, ಹುಬ್ಬಳ್ಳಿಯಲ್ಲಿ ಸ್ಟಾರ್ಟಪ್ ಪಾರ್ಕ್, ಉಳಿದ ಭಾಗಗಳಲ್ಲಿ ಡೀಪ್-ಟೆಕ್ ಪಾರ್ಕ್ ಮತ್ತು ಸ್ವಿಫ್ಟ್ ಸಿಟಿ ಮುಂತಾದವು ಅಸ್ತಿತ್ವಕ್ಕೆ ಬರಲಿವೆ. ಡೀಪ್ ಟೆಕ್ ಮತ್ತು ಸ್ವಿಫ್ಟ್ ಸಿಟಿ ಯೋಜನೆಗಳು ತಲಾ 1 ಲಕ್ಷ ಕೋಟಿ ರೂಪಾಯಿ ಹೂಡಿಕೆ ಸೆಳೆಯುವ ಮತ್ತು ತಲಾ 1 ಲಕ್ಷ ಉದ್ಯೋಗ ಸೃಷ್ಟಿಸುವಂತಹ ಶಕ್ತಿ ಹೊಂದಿವೆ. ಕ್ವಿನ್ ಸಿಟಿ ಅಭಿವೃದ್ಧಿಗೆ ಸಂಬಂಧಿಸಿದಂತೆ 10 ವಿವಿಗಳೊಂದಿಗೆ ಒಡಂಬಡಿಕೆಗೆ ಅಂಕಿತ ಹಾಕಲಾಗಿದೆ ಎಂದು ಎಂಬಿ ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ 1.40 ಕೋಟಿ ಜನಸಂಖ್ಯೆ ಇದ್ದು, 1.10 ಲಕ್ಷ ನೋಂದಾಯಿತ ವಾಹನಗಳಿದ್ದು, ಇದು ನಗರದ ಜನಜೀವನದ ಮೇಲೆ ವಿಪರೀತ ಒತ್ತಡ ಸೃಷ್ಟಿಸಿದೆ. ಆದ್ದರಿಂದ ಕೈಗಾರಿಕೆಗಳು ಬೆಂಗಳೂರಿನಿಂದ ಹೊರಗಿರುವ ಪ್ರದೇಶಗಳಿಗೆ ಹೋಗುವುದನ್ನು ಉತ್ತೇಜಿಸಲಾಗುತ್ತಿದೆ. ಇದಕ್ಕಾಗಿ ವಿಶೇಷ ಪ್ರೋತ್ಸಾಹವನ್ನೇ ನೀಡಲಾಗುತ್ತಿದೆ. ರಾಜ್ಯದಲ್ಲಿ ಪ್ರವಾಸೋದ್ಯಮ ಬೆಳವಣಿಗೆಗೂ ಹೊಸ ನೀತಿ ತರಲಾಗಿದೆ. ವಿಶೇಷವಾಗಿ ರಾಜ್ಯದ 300 ಕಿ.ಮೀ. ಉದ್ದದ ಕರಾವಳಿ ತೀರದಲ್ಲಿ ಪ್ರವಾಸೋದ್ಯಮ ಬೆಳವಣಿಗೆಗೆ ಗಮನ ಹರಿಸಲಿದ್ದೇವೆ. ಜತೆಗೆ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ನೆರವಿಗೆ ಪೋರ್ಟಲ್ ಆರಂಭಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.