ಯಾದಗಿರಿ ನಗರ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಮೊದಲು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿತ್ತು. ಆದ್ರೆ ಮೃತ ಪಿಎಸ್‌ಐ ಪತ್ನಿ ಶ್ವೇತಾ, ಯಾದಗಿರಿ ಶಾಸಕ ಚೆನ್ನಾರೆಡ್ಡಿ ಹಾಗೂ ಪುತ್ರ ಪಂಪನಗೌಡ ವಿರುದ್ಧ ದೂರು ಸಲ್ಲಿಸಿದ್ದಾರೆ.

ಮತ್ತೊಂದೆಡೆ ಪಿಎಸ್‌ಐ ಪರಶುರಾಮ್ ಸಾವು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಬೇಕು. ಯಾರೇ ತಪ್ಪಿತಸ್ಥರು ಇದ್ದರೂ ಕ್ರಮ ಕೈಗೊಳ್ಳಬೇಕು ಅಂತ ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಆದೇಶ ನೀಡಿದ್ದಾರೆ.
ಇನ್ನು ಇದೇ ಪ್ರಕರಣದಲ್ಲಿ ಸೂಕ್ತ ತನಿಖೆಗಾಗಿ ಆಗ್ರಹಿಸಿ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ ಪತ್ರ ಬರೆದಿದ್ದಾರೆ. ಗೃಹಸಚಿವ ಡಾ.ಜಿ.ಪರಮೇಶ್ವರ್‌ಗೆ ಪತ್ರ ಬರೆದಿರುವ ಶರಣಗೌಡ ಕಂದಕೂರ ಅವಧಿ ಪೂರ್ಣಗೊಳ್ಳುವ ಮುನ್ನವೇ ದಿಢೀರ್ ಎಂದು ಅವೈಜ್ಞಾನಿಕವಾಗಿ ವರ್ಗಾವಣೆ ಮಾಡಲಾಗಿದೆ, ಹೀಗಾಗಿ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.











