2023ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ, ಇಂದು ಕಾಂಗ್ರೆಸ್ ಪಕ್ಷ ಚುನಾವಣೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳದ ವಿರುದ್ಧ ಕ್ರಮದ ಬಗ್ಗೆ ಪ್ರಸ್ತಾವ ಮಾಡಿರೋ ಹಿನ್ನೆಲೆ, ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾಂಗ್ರೆಸ್ ನಿಲುವನ್ನು ಬಿಜೆಪಿ ನಾಯಕರು ಖಂಡಿಸಿದ್ದು, ಸೋಶಿಯಲ್ ಮೀಡಿಯಾದಲ್ಲಿ ಪ್ರೊಫೈಲ್ ಪಿಕ್ಚರ್ ಬದಲಿಸುವ ಮೂಲಕ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಡಾ. ಅಶ್ವಥ್ಥನಾರಾಯಣ, ಸಂಸದ ಪ್ರತಾಪಸಿಂಹ, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಇನ್ನಿತರರು ಸಾಮಾಜಿಕ ಜಾಲತಾಣಗಳಲ್ಲಿ ಪ್ರೊಫೈಲ್ ಪಿಕ್ಚರ್ ಬದಲಾವಣೆ ಮಾಡಿ ‘ನಾನೊಬ್ಬ ಬಜರಂಗಿ’ ಎಂಬ ಚಿತ್ರ ಅಳವಡಿಸಿಕೊಂಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಕೂಡ ಪೋಸ್ಟ್ ಮಾಡಿದ್ದಾರೆ.