2023ರ ಕರ್ನಾಟಕ ವಿಧಾಸಭೆ ಚುನಾವಣೆಯ ಫಲಿತಾಂಶ ನೆನ್ನೆಯಷ್ಟೇ ಹೊರಬಿದ್ದಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಎದುರು ಸೋತಿದ್ದ ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಈ ಬಾರಿ ವಿಧಾನಸಭಾ ಚುನಾವಣೆಯಲ್ಲೂ ಸೋಲು ಕಂಡಿದ್ದಾರೆ. ರಾಮನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಎದುರು 10,715 ಮತಗಳ ಅಂತರದಿಂದ ಸೋತಿದ್ದು, ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ನಿಖಿಲ್ ಪ್ರತಿಕ್ರಿಯಿಸಿದ್ದಾರೆ.

ʻನನ್ನನ್ನು ಅತ್ಯಂತ ಪ್ರೀತಿಯಿಂದ ಬೆಂಬಲಿಸಿ ಆಶೀರ್ವದಿಸಿದ ರಾಮನಗರ ವಿಧಾನಸಭೆ ಕ್ಷೇತ್ರದ ಮಹಾಜನತೆಗೆ ನನ್ನ ಶಿರಸಾಷ್ಟಾಂಗ ನಮನಗಳು. ಈ ಒಂದು ಸೋಲು ನಿಮ್ಮ ಸೇವೆ ಮಾಡಬೇಕು ಎನ್ನುವ ನನ್ನ ಅದಮ್ಯ ಸಂಕಲ್ಪಕ್ಕೆ ತಡೆ ಒಡ್ಡಲಾರದು. ನಾನೆಂದೂ ನಿಮ್ಮ ಜತೆಯಲ್ಲೇ ಇರುತ್ತೇನೆ, ನಿಮಗಾಗಿ ಜೀವಿಸುತ್ತೇನೆ. ಸೋಲನ್ನು ಸಮಚಿತ್ತದಿಂದ ಸ್ವಿಕರಿಸಿ ಮುನ್ನಡೆಯುತ್ತೇನೆ. ಅದು ನಾನು ನನ್ನ ಪೂಜ್ಯ ತಾತನವರಾದ ಶ್ರೀ ಹೆಚ್.ಡಿ.ದೇವೇಗೌಡ ಸಾಹೇಬರಿಂದ, ತಂದೆ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರಿಂದ ಕಲಿತ ಪಾಠ. ಎಡವಿದ್ದೇನೆ, ಮತ್ತೆ ಎದ್ದು ಓಡುತ್ತೇನೆ. ಬಿದ್ದ ಮಗುವನ್ನು ಮೇಲೆತ್ತುವ ನಿಮ್ಮ ಪ್ರೀತಿ, ವಾತ್ಸಲ್ಯವನ್ನು ನಾನು ಬಲ್ಲೆ . ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಜಾತ್ಯತೀತ ಜನತಾದಳವನ್ನು ಹರಸಿದ ಸಾರ್ವಜನಿಕ ಬಂಧುಗಳನ್ನು ಇಲ್ಲಿ ಸ್ಮರಿಸುತ್ತೇನೆ. ಸೋಲಿನಿಂದ ಕಂಗೆಟ್ಟು ಜನರಿಂದ ದೂರವಾಗುವ ಜಾಯಮಾನ ನಮ್ಮದಲ್ಲ. ಈ ಪರಾಜಯದಿಂದ ಪಾಠ ಕಲಿಯುತ್ತೇವೆ, ಪುನಾ ಪುಟಿದೆದ್ದು ಬರುತ್ತೇವೆʼ ಅಂತ ನಿಖಿಲ್ ಕುಮಾರಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ
