ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅ. 26ರಂದು ಐಸಿಸಿ ಕ್ರಿಕೆಟ್ ವಿಶ್ವಕಪ್ ಪಂದ್ಯ ನಡೆಯಲಿದ್ದು, ಸುಗಮ ಸಂಚಾರದ ದೃಷ್ಟಿಯಿಂದ ಕ್ರೀಡಾಂಗಣ ಸುತ್ತಮುತ್ತ ವಾಹನಗಳ ನಿಲುಗಡೆ ನಿರ್ಬಂಧಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.
ಇಂಗ್ಲೆಂಡ್ ಹಾಗೂ ಶ್ರೀಲಂಕಾ ತಂಡಗಳ ನಡುವೆ ಪಂದ್ಯ ನಡೆಯಲಿದೆ. ಕಿಂಗ್ಸ್ ರಸ್ತೆ, ಯುಬಿ ಸಿಟಿ ಪಾರ್ಕಿಂಗ್ ಸ್ಥಳ, ಶಿವಾಜಿನಗರ ಬಸ್ ನಿಲ್ದಾಣದ ಪಾರ್ಕಿಂಗ್ ಜಾಗದಲ್ಲಿ ಸಾರ್ವಜನಿಕರು ವಾಹನ ನಿಲ್ಲಿಸಲು ವ್ಯವಸ್ಥೆ ಮಾಡಲಾಗಿದೆ’ ಎಂದು ಹೇಳಿದ್ದಾರೆ.

ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಕ್ವೀನ್ಸ್ ರಸ್ತೆ, ಕಬ್ಬನ್ ರಸ್ತೆ, ಎಂ.ಜಿ. ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಬಾ ರಸ್ತೆ, ವಿಧಾನಸೌಧ-ಹೈಕೋರ್ಟ್ ಎದುರಿನ ರಸ್ತೆ, ವಿಠ್ಠಲ್ ಮಲ್ಯ ರಸ್ತೆ ಹಾಗೂ ನೃಪತುಂಗ ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ಅವಕಾಶವಿಲ್ಲ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.












