ಬೆಂಗಳೂರು: ಮೇ.31: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಜಾರಿ ಮಾಡಲು ನಾಳೆ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನು ಮುಂದೂಡಿದ್ದಾರೆ. 5 ಗ್ಯಾರಂಟಿಗಳನ್ನ ಜಾರಿಮಾಡಲು ನಾಳೆ (ಗುರುವಾರ) ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನು ಶುಕ್ರವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆ ಮಾಡಿದ್ದಾರೆ. ಶುಕ್ರವಾರ ಜೂನ್ 2ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು ಅಂದು ಸರ್ಕಾರದ 5 ಗ್ಯಾರೆಂಟಿ ಯೋಜನೆಗಳ ಜಾರಿ ಸಂಬಂಧ ಸ್ಪಷ್ಟ ನಿರ್ಧಾರ ಪ್ರಕಟವಾಗಲಿದೆ ಎಂದು ಹೇಳಲಾಗುತ್ತಿದೆ.
ಐದು ಗ್ಯಾರೆಂಟಿಗಳನ್ನು ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಜೂನ್ 2 ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿಳಿಸಿದರು. ಇಂದು ಗ್ಯಾರಂಟಿ ಯೋಜನೆಗಳ ಕುರಿತು ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಐದು ಗ್ಯಾರೆಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯ ಅಧಿಕಾರಿಗಳು ಸಚಿವರಿಗೆ ಗ್ಯಾರೆಂಟಿ ಯೋಜನೆಗಳ ಆರ್ಥಿಕ ಪರಿಣಾಮ ಸೇರಿದಂತೆ ವಿವರಗಳ ಪ್ರಾತ್ಯಕ್ಷಿಕೆಯನ್ನು ಸಲ್ಲಿಸಿದ್ದಾರೆ ಎಂದು ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.