ಸಾಗರ: ಅನೇಕ ವರ್ಷಗಳಿಂದ ಅರಣ್ಯ ಮತ್ತು ಕಂದಾಯ ಭೂಮಿಯಲ್ಲಿ ಬಗರ್‌ಹುಕುಂ ಸಾಗುವಳಿ ಮಾಡಿಕೊಂಡು ಬಂದಿರುವ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದ ರಾಜ್ಯ ಸರ್ಕಾರ ಈಗ ಅರಣ್ಯ ಇಲಾಖೆಗೆ ಒತ್ತುವರಿ ಮಾಡಿದ ರೈತರನ್ನು ತೆರವುಗೊಳಿಸುವುದಕ್ಕೆ ಪತ್ರ ಬರೆದಿರುವುದು ದ್ವಂದ್ವ ನಿಲುವಿಗೆ ಸಾಕ್ಷಿ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವತಃ ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆಯವರೇ ಈ ಪತ್ರ ಬರೆದಿರುವುದು ಬಹಿರಂಗವಾಗಿದೆ. ಈ ಪತ್ರದಿಂದ ಅಧಿಕಾರಿಗಳು ಗೊಂದಲದಲ್ಲಿದ್ದಾರೆ. ಅಧಿಕಾರ ಬಂದ ಮೇಲೆ ರೈತರನ್ನು ಮರೆತಿರುವ ರಾಜ್ಯ ಸರ್ಕಾರ ಒತ್ತುವರಿ ತೆರವು ವಿಷಯದಲ್ಲಿ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಮತ್ತು ತಕ್ಷಣ ಅಧಿಕಾರಿಗಳಿಗೆ ಬರೆದಿರುವ ಪತ್ರವನ್ನು ಹಿಂಪಡೆದು ರೈತರ ಹಿತ ಕಾಯಬೇಕು ಎಂದು ಒತ್ತಾಯಿಸಿದರು.
ತಾಲೂಕಿನ ಶರಾವತಿ ಮುಳುಗಡೆ ಸಂತ್ರಸ್ತರಿಗಾಗಿ 2015ರಲ್ಲಿ ಹಿರಿಯರಾದ ಕಾಗೋಡು ತಿಮ್ಮಪ್ಪ ಅವರು 6500 ಹೆಕ್ಟೇರ್ ಭೂಮಿಯನ್ನು ಡಿನೋಟಿಫೈ ಮಾಡಿಸಿದ್ದರು. ಆದರೆ, ಕೆಲವು ತಾಂತ್ರಿಕ ಕಾರಣಕ್ಕಾಗಿ ನ್ಯಾಯಾಲಯ ತಕರಾರು ಮಾಡಿತು. ಈ ಹಿಂದಿನ ಬಿಜೆಪಿ ಸರ್ಕಾರ ಕೂಡ ಸಂತ್ರಸ್ತರಿಗೆ ಭೂಮಿ ಕೊಡಿಸುವ ಪ್ರಯತ್ನ ನಡೆದಿತ್ತು. ಕೇಂದ್ರ ಸರ್ಕಾರಕ್ಕೆ ಯಡಿಯೂರಪ್ಪ ನೇತೃತ್ವದಲ್ಲಿ 9400 ಹೆಕ್ಟೇರ್ ಭೂಮಿಯನ್ನು ಮಂಜೂರು ಮಾಡಿಸುವ ಪ್ರಯತ್ನ ಮಾಡಲಾಗಿತ್ತು. ಈ ನಡುವೆ ರಾಜ್ಯ ಅರಣ್ಯ ಸಚಿವರ ನಿಲುವು ಅನುಮಾನಕ್ಕೆ ಕಾರಣವಾಗಿದೆ. ನಾವು ಹೊಸದಾಗಿ ಒತ್ತುವರಿದಾರರಿಗೆ ಯಾವುದೇ ರೀತಿಯ ಬೆಂಬಲ ನೀಡುವುದಿಲ್ಲ. ಆದರೆ, ರೈತರು ಸಾಗುವಳಿ ಮಾಡಿಕೊಂಡಿರುವುದನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.