ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್ನಲ್ಲಿ ಟೀಮ್ ಇಂಡಿಯಾ 295 ರನ್ಗಳ ಭರ್ಜರಿ ಜಯ ಸಾಧಿಸಿತ್ತು. ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್ಗಳ ಗೆಲುವು ಸಾಧಿಸಿತ್ತು. ಮೂರನೇ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿತ್ತು. ಮೆಲ್ಬೋರ್ನ್ನಲ್ಲಿ ಉಭಯ ತಂಡಗಳು 4ನೇ ಟೆಸ್ಟ್ ಪಂದ್ಯವನ್ನಾಡುತ್ತಿದೆ.

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 474 ರನ್ಗಳಿಸಿ ಆಲೌಟ್ ಆಗಿದೆ. ಮೊದಲ ಇನಿಂಗ್ಸ್ ಆಡುತ್ತಿರುವ ಟೀಮ್ ಇಂಡಿಯಾ ಪರ ನಿತೀಶ್ ಕುಮಾರ್ ರೆಡ್ಡಿ ಶತಕ ಸಿಡಿಸಿದ್ದು, ಈ ಮೂಲಕ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ದಿಟ್ಟ ಹೋರಾಟವನ್ನೇ ಪ್ರದರ್ಶಿಸಿದೆ.

ಮೆಲ್ಬೋರ್ನ್ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ನಿತೀಶ್ ಕುಮಾರ್ ರೆಡ್ಡಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿತೀಶ್ 171 ಎಸೆತಗಳಲ್ಲಿ ಚೊಚ್ಚಲ ಶತಕ ಪೂರೈಸಿದರು.

ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್ನಲ್ಲಿ 474 ರನ್ ಕಲೆಹಾಕಿದೆ. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಕೇವಲ 3 ರನ್ಗಳಿಸಿ ಔಟಾದರೆ, ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೆಎಲ್ ರಾಹುಲ್ 24 ರನ್ಗಳಿಸಿ ವಿಕೆಟ್ ಒಪ್ಪಿಸಿದರು.

ಈ ಹಂತದಲ್ಲಿ ಜೊತೆಗೂಡಿದ ವಿರಾಟ್ ಕೊಹ್ಲಿ ಹಾಗೂ ಯಶಸ್ವಿ ಜೈಸ್ವಾಲ್ ಶತಕದ ಜೊತೆಯಾಟ ಪ್ರದರ್ಶಿಸಿದರು. ಆದರೆ ತಂಡದ ಮೊತ್ತ 153 ರನ್ ಆಗಿದ್ದ ವೇಳೆ ರನ್ ಕದಿಯುವ ಯತ್ನದಲ್ಲಿ ಯಶಸ್ವಿ ಜೈಸ್ವಾಲ್ (82) ರನೌಟ್ ಆಗಿ ಹೊರ ನಡೆದರು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ (36) ಸಹ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ಆಕಾಶ್ ದೀಪ್ (0) ಶೂನ್ಯಕ್ಕೆ ಔಟಾದರೆ, ರಿಷಭ್ ಪಂತ್ 28 ರನ್ಗಳಿಸಲಷ್ಟೇ ಶಕ್ತರಾದರು.

ಈ ಹಂತದಲ್ಲಿ ಕಣಕ್ಕಿಳಿದ ನಿತೀಶ್ ಕುಮಾರ್ ರೆಡ್ಡಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. ಎಚ್ಚರಿಕೆಯೊಂದಿಗೆ ರನ್ ಗಳಿಸುತ್ತಾ ಸಾಗಿದ ನಿತೀಶ್ 81 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಹಾಫ್ ಸೆಂಚುರಿಯ ಬಳಿಕ ಆಸೀಸ್ ಬೌಲರ್ಗಳನ್ನು ಕಾಡಿದ ಯುವ ದಾಂಡಿಗ ಟೀಮ್ ಇಂಡಿಯಾ ಮೊತ್ತವನ್ನು 300ರ ಗಡಿದಾಟಿಸುವಲ್ಲಿ ಪ್ರಮುಖ ಪಾತ್ರವಹಿಸಿದರು.

ಮೆಲ್ಬೋರ್ನ್ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ 3ನೇ ದಿನದಾಟದ ಅಂತ್ಯಕ್ಕೆ ಟೀಮ್ ಇಂಡಿಯಾ 9 ವಿಕೆಟ್ ಕಳೆದುಕೊಂಡು 358 ರನ್ ಕಲೆಹಾಕಿದೆ.