ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ. ಶಿವಕುಮಾರ್ ಅವರು, ತಮ್ಮ ಆಯ್ಕೆಯನ್ನು ವೈಯಕ್ತಿಕ ಸಾಧನೆಯಾಗಿ ಅಲ್ಲ, ಪಕ್ಷದ ಕಾರ್ಯಕರ್ತರ ಗೆಲುವಾಗಿ ಬಣ್ಣಿಸಿದ್ದಾರೆ. “ನಾನು ಮುಖ್ಯಮಂತ್ರಿಯಾಗುತ್ತಿಲ್ಲ, ಕಾಂಗ್ರೆಸ್ ಪಕ್ಷದ ಒಬ್ಬ ನಿಷ್ಠಾವಂತ ಕಾರ್ಯಕರ್ತ ಮುಖ್ಯಮಂತ್ರಿ ಸ್ಥಾನಕ್ಕೇರುತ್ತಿದ್ದಾನೆ” ಎಂದು ಅವರು ಹೇಳಿದ್ದಾರೆ.ಭಾನುವಾರ ಕುಮಾರಕೃಪಾ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ತಮ್ಮ ರಾಜಕೀಯ ಪಯಣವನ್ನು ಸ್ಮರಿಸಿದರು.

ವಿದ್ಯಾರ್ಥಿ ನಾಯಕನಾಗಿ ರಾಜಕೀಯ ಜೀವನ ಆರಂಭಿಸಿ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಬೆಳೆದಿರುವುದಾಗಿ ಹೇಳಿದ ಅವರು, ಇಂದು ಕಾರ್ಯಕರ್ತರ ಸಂಭ್ರಮಕ್ಕೆ ಅದೇ ಕಾರಣ ಎಂದು ತಿಳಿಸಿದರು.
“ರಾಜ್ಯದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ಇದು ನನ್ನ ವೈಯಕ್ತಿಕ ವಿಜಯವಲ್ಲ. ಪಕ್ಷದ ಸಾಮಾನ್ಯ ಕಾರ್ಯಕರ್ತನೊಬ್ಬ ಮುಖ್ಯಮಂತ್ರಿ ಹುದ್ದೆಗೇರುತ್ತಿರುವ ಸಂತಸದ ಕ್ಷಣ” ಎಂದು ಅವರು ಹೇಳಿದರು.
ಪ್ರಮಾಣವಚನ ಸಮಾರಂಭದ ಸಂದರ್ಭದಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೂವಿನ ಹಾರಗಳೊಂದಿಗೆ ಬರುವುದನ್ನು ತಪ್ಪಿಸುವಂತೆ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.
“ನನಗೆ ಸುಗಂಧರಾಜ ಹೂವಿನಿಂದ ಅಲರ್ಜಿ ಇದೆ. ಆ ಹೂವು ಮುಟ್ಟಿದರೆ ತುರಿಕೆ ಹಾಗೂ ಆರೋಗ್ಯ ಸಮಸ್ಯೆ ಉಂಟಾಗುತ್ತದೆ. ಹೀಗಾಗಿ ದಯವಿಟ್ಟು ಯಾರೂ ಹೂವಿನ ಹಾರ ತಂದು ಹಾಕಬೇಡಿ” ಎಂದು ಅವರು ವಿನಂತಿಸಿದರು.
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸದ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದ್ದು, ನಿವಾಸದ ಮುಂಭಾಗ ಹಾಗೂ ಪ್ರವೇಶ ಮಾರ್ಗಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ.
ಸ್ಥಳೀಯ ನಿವಾಸಿಗಳು ಮತ್ತು ಆಪ್ತರ ವಾಹನಗಳನ್ನು ಹೊರತುಪಡಿಸಿ ಇತರ ವಾಹನಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಕಾರ್ಯಕರ್ತರು ಮತ್ತು ಅಭಿಮಾನಿಗಳ ಹೆಚ್ಚಿದ ಸಂಖ್ಯೆಯನ್ನು ನಿಯಂತ್ರಿಸಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಭದ್ರತಾ ವ್ಯವಸ್ಥೆಗಳ ಪರಿಶೀಲನೆ ನಡೆಸಿದ್ದಾರೆ.






