ಜನಸಂಖ್ಯೆ ಹೆಚ್ಚಾದಂತೆ ನಿರುದ್ಯೋಗ ಹೆಚ್ಚಾಗುತ್ತದೆ. ಈ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸಾಕಷ್ಟು ಉದ್ಯೋಗ ಸೃಷ್ಟಿ ಮಾಡುವ ಕಾರ್ಯವನ್ನು ಮಾಡುತ್ತಿದೆ. ಆದರೆ ಕಾಂಗ್ರೆಸ್ ಮಾತ್ರ 60-70 ವರ್ಷ ಕಾಲ ಆಡಳಿತ ನಡೆಸಿದರೂ ಯಾವುದೇ ಕಾರ್ಯಗಳನ್ನು ಕೂಡ ಮಾಡಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ವಿರುದ್ದ ಕಿಡಿಕಾರಿದ್ದಾರೆ.
ಸಿಎಂ ಕುರ್ಚಿಗಾಗಿ ಈಗಾಗಲೇ ಕಾಂಗ್ರೆಸ್ ನಾಯಕರ ನಡುವೆ ಕಿತ್ತಾಟ ನಡೆದಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ವ ಪತನ ಕಾಣಲಿದೆ. ಪ್ರಸ್ತುತ ದೇಶದಲ್ಲಿ ಕಾಂಗ್ರೆಸ್ ಕ್ಷೀಣಿಸುತ್ತಿದೆ. ದೇಶದ ಹಲವಾರು ರಾಜ್ಯಗಳಲ್ಲಿ ಕಾಂಗ್ರೆಸ್ ನಾಯಕರು ಪಕ್ಷವನ್ನು ತೊರೆದು ಬಿಜೆಪಿ ಸೇರುತ್ತಿದ್ದಾರೆ. ಸಂಪೂರ್ಣವಾಗಿ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳುತ್ತಿದೆ ಎಂದಿದ್ದಾರೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಿಬ್ಬರು ಸಿಎಂ ಸ್ಥಾನಕ್ಕೆ ಕಿತ್ತಾಡುತ್ತಿದ್ದಾರೆ. 2023 ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದೆ. ಕಾಂಗ್ರೆಸ್ ನಾಯಕರ ಕನಸು ಯಾವತ್ತು ನನಸಾಗೋದಿಲ್ಲ. ಮುಂಬರುವ ರಾಜ್ಯದ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬರುತ್ತದೆ. ಕಾಂಗ್ರೆಸ್ ನಾಯಕರು ಸಿಎಂ ಸ್ಥಾನ ಪಡೆಯಲು ಏನೇ ಪ್ರಯತ್ನ ಮಾಡಿದರು ಆಗುವುದಿಲ್ಲ. ಬರುವಂತಹ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದುಭವಿಷ್ಯ ನುಡಿದಿದ್ದಾರೆ.






