ಹುಬ್ಬಳ್ಳಿ : ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗಲೇ ಸಾಕಷ್ಟು ರಾಜಕೀಯ ಬೆಳವಣಿಗೆಗಳು ಸಂಭವಿಸುತ್ತಿದೆ. ಕೆಲವೇ ತಿಂಗಳುಗಳ ಹಿಂದೆ ಸಚಿವ ಸ್ಥಾನಕ್ಕಾಗಿ ರಾಜ್ಯ ಬಿಜೆಪಿ ನಾಯಕರಿಗೆ ಒತ್ತಡ ಹೇರುತ್ತಿದ್ದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಇಂದು ಏಕಾಏಕಿ ರಾಜಕೀಯ ಜೀವನಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ.
ಮೊನ್ನೆ ಮೊನ್ನೆಯಷ್ಟೇ ಕುಂದಾಪುರದ ಹಾಲಾಡಿ ಶ್ರೀನಿವಾಸ ಶೆಟ್ಟಿ ರಾಜಕೀಯ ನಿವೃತ್ತಿ ಘೋಷಿಸಿದ್ದರು. ಇದೀಗ ಈಶ್ವರಪ್ಪ ಕೂಡ ತಮ್ಮ ಪುತ್ರನಿಗೆ ಶಿವಮೊಗ್ಗ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಡುವ ಸಲುವಾಗಿ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗ್ತಿದೆ.

ಕೆ.ಎಸ್ ಈಶ್ವರಪ್ಪ ಚುನಾವಣೆಯಿಂದ ಹಿಂದೆ ಸರಿದ ಬೆನ್ನಲ್ಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬೆಂಗಳೂರಿಗೆ ದೌಡಾಯಿಸಿದ್ದಾರೆ. ದೆಹಲಿಯಲ್ಲಿ ಸೋಮವಾರ ರಾತ್ರಿ ವಾಪಸ್ಸಾಗಿರುವ ಯಡಿಯೂರಪ್ಪ ನಿವಾಸಕ್ಕೆ ಶೆಟ್ಟರ್ ಭೇಟಿ ನೀಡಲಿದ್ದು ಇಲ್ಲಿ ರಾಜಕೀಯ ನಿವೃತ್ತಿ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಯಿದೆ. ಬಿಜೆಪಿಯಿಂದ ಈ ಬಾರಿ ತಮಗೆ ಟಿಕೆಟ್ ಇಲ್ಲ ಎಂಬುದು ಕನ್ಫರ್ಮ್ ಆದಲ್ಲಿ ಶೆಟ್ಟರ್ ಕೂಡ ಈಶ್ವರಪ್ಪ ಹಾದಿಯನ್ನೇ ತುಳಿಯುವ ಸಾಧ್ಯತೆ ದಟ್ಟವಾಗಿದೆ.