ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಡುವ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ನಾಲ್ಕನೇ ಬಾರಿ ಮಾತು ಕೊಟ್ಟಿದ್ದಾರೆ. ಇದನ್ನು ಸರ್ಕಾರಕ್ಕೆ ನೆನಪಿಸುವ ವಿಚಾರವಾಗಿ ಜುಲೈ 30 ರಂದು ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮೃತ್ಯುಂಜಯ ಸ್ವಾಮೀಜಿ, ಈಗಾಗಲೇ ಮೀಸಲಾತಿ ವಿಚಾರವಾಗಿ ನಿರಂತರ ಹೋರಾಟ ಮಾಡಲಾಗುತ್ತಿದೆ. ಪರಿಣಾಮ ಮುಖ್ಯಮಂತ್ರಿಗಳು ಮೂರು ಬಾರಿ ಮಾತು ಕೊಟ್ಟು ತಪ್ಪಿದ್ದಾರೆ. ಇದರಿಂದಾಗಿಯೇ ಶಿಗ್ಗಾಂವ್ ನಲ್ಲಿರುವ ಸಿಎಂ ಮನೆಮುಂದೆಯೇ ಧರಣಿ ನಡೆಸಲು ತಿರ್ಮಾಣ ಮಾಡಲಾಗಿತ್ತು. ಆದರೆ, ಮುಖ್ಯಮಂತ್ರಿಗಳು ನಮ್ಮ ಸಮಾಜದ ಸಚಿವರ ಮೂಲಕ ಸಂಧಾನಕ್ಕೆ ಮುಂದಾಗಿ ಎರಡು ತಿಂಗಳ ಕಾಲಾವಕಾಶ ಕೇಳಿದ್ದಾರೆ.
ಅದರಂತೆ ಆಗಸ್ಟ್ 22 ರೊಳಗೆ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಡುವ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ನೆನಪಿಸುವ ಉದ್ದೇಶದಿಂದ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದಿದ್ದಾರೆ.
ಜುಲೈ 30ರಂದು ನೆಹರೂ ಮೈದಾನದಿಂದ ಚೆನ್ನಮ್ಮ ವೃತ್ತದವರೆಗೆ ಮೆರವಣಿಗೆ ಬಂದು ಅಲ್ಲಿ ಧರಣಿ ನಡೆಸಲಾಗುವುದು. ಸುಮಾರು 10 ಸಾವಿರಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ ಇದೆ. ಶಾಸಕ ಬಸನಗೌಡ ಯತ್ನಾಳ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.