ರಾಜ್ಯಸಭೆ ಚುನಾವಣೆ ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಕಣದಲ್ಲಿದ್ದು, ಈ ನಡುವೆ ಜೆಡಿಎಸ್ ನಾಯಕರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಬುಧವಾರ ಸಿದ್ದರಾಮಯ್ಯ ಅವರ ನಿವಾಸಕ್ಕೆ ಆಗಮಿಸಿದ ವಿಧಾನಪರಿಷತ್ ಸದಸ್ಯರಾದ ಟಿ.ಎ ಶರವಣ ಹಾಗೂ ಬಿಎಂ ಫಾರೂಕ್ ಕೆಲ ಹೊತ್ತು ಮಾತುಕತೆ ನಡೆಸಿದರು. ರಾಜ್ಯಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ.
ರಾಜ್ಯಸಭೆ ಚುನಾವಣೆಯಲ್ಲಿ ನಾಲ್ಕನೇ ಸ್ಥಾನಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಮನ್ಸೂರ್ ಅಲಿ ಖಾನ್ ನಾಮಪತ್ರವನ್ನು ಸಲ್ಲಿಕೆ ಮಾಡಿದರೆ ಜೆಡಿಎಸ್ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣಕ್ಕಿಳಿದಿದ್ದಾರೆ.

ಈಗಾಗಲೇ ಜೆಡಿಎಸ್ ಮುಖಂಡರು ನಮ್ಮ ಅಭ್ಯರ್ಥಿಗೆ ಬೆಂಬಲ ನೀಡಬೇಕು ಎಂಬ ಮನವಿಯನ್ನು ಕಾಂಗ್ರೆಸ್ ಗೆ ಮಾಡಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹಾಗೂ ಮಾಜಿ ಸಚಿವ ಎಚ್ ಡಿ ರೇವಣ್ಣ ಕೂಡಾ ಕುಪೇಂದ್ರ ರೆಡ್ಡಿಯನ್ನು ಬೆಂಬಲ ಮಾಡಬೇಕು ಎಂದು ಕಾಂಗ್ರೆಸ್ ಗೆ ಬಹಿರಂಗ ಮನವಿ ಮಾಡಿದ್ದಾರೆ.
ನಮ್ಮ ಅಭ್ಯರ್ಥಿಗೆ ಬೆಂಬಲ ನೀಡುವ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಜೊತೆಗೂ ಮಾತುಕತೆ ಮಾಡಿದ್ದೇವೆ ಎಂಬುವುದು ಜೆಡಿಎಸ್ ವಾದವಾಗಿದೆ.
ಈ ನಡುವೆ ಪರಿಷತ್ ಸದಸ್ಯರಾದ ಶರವಣ ಹಾಗೂ ಬಿಎಂ ಫಾರೂಕ್ ಬುಧವಾರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.













