ಬೀದರ್: ಕನ್ನಡ ಕಿರುತೆರೆಯ ಜನಪ್ರಿಯ ಹಾಸ್ಯ ಕಲಾವಿದ ನಟ ಸಿದ್ದಾರ್ಥ ಪರಸನೋರ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಹಣಕುಣಿ ರಸ್ತೆಯ ಪಕ್ಕದ ಅರಣ್ಯ ಪ್ರದೇಶದಲ್ಲಿ ನಟನ ಮೃತದೇಹವು ಪತ್ತೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

36 ವರ್ಷದ ನಟ ಸಿದ್ದಾರ್ಥ ಪರಸನೋರ ಹುಮನಾಬಾದ್‌ನ ಟೀಚರ್ಸ್ ಕಾಲೋನಿಯ ನಿವಾಸಿಯಾಗಿದ್ದು, ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದರು. ಜೂನ್ 13ರಂದು ಸಂಜೆ ಕೆಲವು ಸ್ನೇಹಿತರೊಂದಿಗೆ ಹೊರಗೆ ಹೋಗಿದ್ದ ಸಿದ್ದಾರ್ಥ, ಮನೆಗೆ ಮರಳದೇ ನಾಪತ್ತೆಯಾಗಿದ್ದರು. ಹುಡುಕಾಟ ನಡೆಸಿದ ಕುಟುಂಬಸ್ಥರು ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರಿನ ಮೇರೆಗೆ ತನಿಖೆ ಆರಂಭಿಸಿದ ಪೊಲೀಸರು ಸಿದ್ದಾರ್ಥ ಅವರ ಮೊಬೈಲ್ ಲೊಕೇಶನ್ ಆಧರಿಸಿ ಶೋಧ ನಡೆಸಿದ್ದರು. ಈ ವೇಳೆ ಹಣಕುಣಿ ರಸ್ತೆಯ ಸಮೀಪವಿರುವ ಅರಣ್ಯ ಪ್ರದೇಶದಲ್ಲಿ ಸಿದ್ದಾರ್ಥ ಅವರ ಮೃತದೇಹ ಪತ್ತೆಯಾಗಿದೆ. ಕೂಡಲೇ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಈ ಸಾವು ಹಲವು ಅನುಮಾನಗಳನ್ನು ಮೂಡಿಸಿವೆ. ಆದರೆ ಮರಣೋತ್ತರ ಪರೀಕ್ಷೆ ವರದಿ ಬಂದ ನಂತರವಷ್ಟೇ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಸದ್ಯ ಹುಮನಾಬಾದ್ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.







