ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ಕಗ್ಗಂಟು ಬಗೆಹರಿದ ಬಳಿಕ ಇದೀಗ ಸಚಿವ ಸ್ಥಾನಕ್ಕಾಗಿ ಲಾಭಿ ಶುರುವಾಗಿದೆ. ಸಚಿವ ಸಂಪುಟ (Karnataka Cabinet) ರಚನೆಗೆ ಕಸರತ್ತು ನಡೆಯುತ್ತಿದೆ. ನಿಯೋಜಿತ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಇಂದು ಸಚಿವ ಸ್ಥಾನಕ್ಕೆ ಆಕಾಂಕ್ಷಿಗಳ ಶಾಸಕರ ಪಟ್ಟಿ ಹಿಡಿದು ದೆಹಲಿಗೆ ತೆರಳಿದ್ದಾರೆ.
ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ ಉಭಯ ನಾಯಕರು ಸಂಪುಟ ರಚನೆ ಸಂಬಂಧ ಹೈಕಮಾಂಡ್ ಜೊತೆ ಚರ್ಚೆ ನಡೆಸಿ, ಇಂದು ಸಂಜೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ. ನಾಳೆ ನಡೆಯುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ 12ರಿಂದ 15 ಸಚಿವರನ್ನು ಸಂಪುಟಕ್ಕೆ ಸೇರಿಸುವ ಸಾಧ್ಯತೆ ಇದೆ, ಇವರಲ್ಲಿ ಹೆಚ್ಚಿನವರು ಹಿರಿಯ ನಾಯಕರಾಗಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೊಸ ಮುಖಗಳಿಗೂ ಸಚಿವ ಸ್ಥಾನ ಸಿಗುತ್ತೋ ಇಲ್ಲವೋ ಕಾದುನೋಡಬೇಕಾಗಿದೆ.