ಬೆಂಗಳೂರು: ಎಸ್‌ಎಸ್‌ಎಲ್‌ಸಿ(SLCC) ಹಾಗೂ ಪಿಯುಸಿ(PUC) ಪರೀಕ್ಷೆಗಳು ವಿದ್ಯಾರ್ಥಿಗಳ ಜೀವನದ ಅತ್ಯಂತ ಮಹತ್ವದ ಘಟ್ಟಗಳಾಗಿವೆ. ಆದರೆ ಈ ಬಾರಿಯ ಎಸ್‌ಎಸ್‌ಎಲ್‌ಸಿ ಮೊದಲ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ಪ್ರಕರಣ ರಾಜ್ಯದಾದ್ಯಂತ ಭಾರೀ ಸಂಚಲನ ಮೂಡಿಸಿದೆ. ಇದು ಶಿಕ್ಷಣ ಇಲಾಖೆಗೆ ದೊಡ್ಡ ಎಚ್ಚರಿಕೆ ಗಂಟೆಯಾಗಿದ್ದು, ಮುಂದಿನ 2ನೇ ಪೂರ್ವಭಾವಿ ಪರೀಕ್ಷೆ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಪರೀಕ್ಷೆಯ ಸಮಯವನ್ನೇ ಬದಲಾಯಿಸುವ ಮಹತ್ವದ ತೀರ್ಮಾನವನ್ನು ಶಿಕ್ಷಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕೈಗೊಂಡಿದೆ. ಈವರೆಗೆ ಬೆಳಗ್ಗೆ 10 ಗಂಟೆಗೆ ಆರಂಭವಾಗುತ್ತಿದ್ದ ಎಸ್‌ಎಸ್‌ಎಲ್‌ಸಿ ಪೂರ್ವಭಾವಿ ಪರೀಕ್ಷೆಯನ್ನು ಈಗ ಬೆಳಗ್ಗೆ 11 ಗಂಟೆಗೆ ಆರಂಭಿಸಲು ನಿರ್ಧಾರ ಮಾಡಲಾಗಿದೆ. ಈ ಬದಲಾವಣೆ ಜನವರಿ 27ರಿಂದ ಫೆಬ್ರವರಿ 2ರವರೆಗೆ ನಡೆಯುವ 2ನೇ ಪೂರ್ವಭಾವಿ ಪರೀಕ್ಷೆಗೆ ಅನ್ವಯವಾಗಲಿದೆ.

ಪ್ರಶ್ನೆ ಪತ್ರಿಕೆ ಸುರಕ್ಷತೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಪ್ರಕಟಿಸಿದೆ ಬೆಳಿಗ್ಗೆ 9:30ಕ್ಕೆ ಮುಖ್ಯೋಪಾಧ್ಯಾಯರು ಶಾಲೆಯ ಅಧಿಕೃತ ಲಾಗಿನ್ ಮೂಲಕ ಪ್ರಶ್ನೆ ಪತ್ರಿಕೆಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಬೆಳಿಗ್ಗೆ 10:00 ಗಂಟೆಗೆ ಪ್ರಶ್ನೆ ಪತ್ರಿಕೆಗಳ ಮುದ್ರಣ (ಪ್ರಿಂಟಿಂಗ್) ಪೂರ್ಣಗೊಳ್ಳಬೇಕು. ಬೆಳಗ್ಗೆ 10:30ಕ್ಕೆ ಪ್ರಶ್ನೆ ಪತ್ರಿಕೆಗಳು ವಿತರಣೆಗೆ ಸಿದ್ಧವಾಗಿರಬೇಕು.
ಇದನ್ನೂ ಓದಿ: Viral Video: ವ್ಯಕ್ತಿಯ ಜೀವ ಬಲಿ ಪಡೆದ 26 ಸೆಕೆಂಡ್‌ಗಳ ರೀಲ್ಸ್: ಅಸಲಿಗೆ ಆಗಿದ್ದೇನು..?
10:50ಕ್ಕೆ ಪ್ರಶ್ನೆ ಪತ್ರಿಕೆಗಳು ಪರೀಕ್ಷಾ ಕೊಠಡಿಗಳನ್ನು ತಲುಪಬೇಕು ಹಾಗೂ 11:00 ಪರೀಕ್ಷೆ ಅಧಿಕೃತವಾಗಿ ಆರಂಭವಾಗಲಿದೆ. ವಿದ್ಯಾರ್ಥಿಗಳು ಬೆಳಿಗ್ಗೆ 9 ಗಂಟೆಗೆಲೇ ತಮ್ಮ ತರಗತಿಗಳಲ್ಲಿ ಹಾಜರಿರಬೇಕು. ಪರೀಕ್ಷೆ ಆರಂಭಕ್ಕೂ ಮುನ್ನ ಬೆಳಿಗ್ಗೆ 9ರಿಂದ 10:30ರವರೆಗೆ ಶಾಲೆಗಳಲ್ಲಿ ಸಾಮಾನ್ಯ ತರಗತಿಗಳು ನಡೆಯಲಿವೆ.

ಪ್ರಶ್ನೆ ಪತ್ರಿಕೆ ಸೋರಿಕೆಯಾದಲ್ಲಿ ಯಾವುದೇ ವಿನಾಯಿತಿ ಇಲ್ಲ ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. ಸಂಬಂಧಿಸಿದ ಮುಖ್ಯೋಪಾಧ್ಯಾಯರು, ಶಿಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿ, ಹಾಗೂ ಜಿಲ್ಲಾ ಉಪನಿರ್ದೇಶಕರು ಇವರೆಲ್ಲರನ್ನೂ ನೇರವಾಗಿ ಹೊಣೆಗಾರರನ್ನಾಗಿ ಮಾಡಿ, ಪ್ರತ್ಯೇಕವಾಗಿ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.











