ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸರ್ಕಾರಿ ಗೋಶಾಲೆಗಳಲ್ಲಿ ಪ್ರತಿ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆಯುತ್ತೇನೆ ಎಂದು ಚಿತ್ರನಟ ಸುದೀಪ್ ತಿಳಿಸಿದ್ದಾರೆ.
ಪಶುಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್‌ರೊಂದಿಗೆ ತಮ್ಮ ನಿವಾಸದಲ್ಲಿ ಗೋವುಗಳಿಗೆ ಪೂಜೆ ನೇರವೇರಿಸಿ ಮಾತನಾಡಿದ ಸುದೀಪ್ ರಾಜ್ಯ ಸರ್ಕಾರ ಗೋಸಂಕುಲ ಸಂರಕ್ಷಣೆಯಲ್ಲಿ ಮಹತ್ವದ ಕೆಲಸ ಮಾಡುತ್ತಿದೆ.
ನನ್ನನ್ನು ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯನ್ನಾಗಿ ನೇಮಕ ಮಾಡಿ ಸರ್ಕಾರ ನನ್ನ ಜವಾಬ್ದಾರಿ ಹೆಚ್ಚಿಸಿದೆ. ನನ್ನನ್ನು ನೇಮಕ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಪ್ರಭು ಚವ್ಹಾಣ್ ಅವರಿಗೆ ಕೃತಜ್ಞತೆ ತಿಳಿಸುತ್ತೇನೆ. ಸಾರ್ವಜನಿಕರು, ಚಿತ್ರರಂಗದ ಕಲಾವಿದರು, ಸಾರ್ವಜನಿಕ ಸಂಘ ಸಂಸ್ಥೆಗಳು ಗೋವುಗಳನ್ನು ದತ್ತು ಪಡೆಯಬೇಕು ಎಂದು ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಹುಟ್ಟುಹಬ್ಬದಂದು 11 ಗೋವು ದತ್ತು ಪಡೆದು, ತಮ್ಮ ಕನಸಿನ ಕೂಸಾದ ಪುಣ್ಯಕೋಟಿ ದತ್ತು ಯೋಜನೆ ಜಾರಿಗೆ ತಂದರು. ನಾನು ಕೂಡ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆದಿದ್ದೇನೆ ಎಂದು ಸಚಿವ ಪ್ರಭು ಚವ್ಹಾಣ್ ಅವರು ವಿವರಿಸಿದಾಗ ನಾನು ಕೂಡ ನಿಮ್ಮಂತೆ ದತ್ತು ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಚಿತ್ರನಟ ಸುದೀಪ್ ಅವರಿಗೆ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿ ನೇಮಕಾತಿ ಪತ್ರ ವಿತರಿಸಿ, ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು.