ರೈತರು ಬರಗಾಲದ ಸಂಕಷ್ಟದಿಂದ ನರಳುತ್ತಿದ್ದಾರೆ. ಈ ವಿಷಯದಲ್ಲಿ ಸರಿಯಾಗಿ ಕ್ರಮಕೈಗೊಳ್ಳದೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ರೈತರ ಜೀವನದ ಜೊತೆಗೆ ಚೆಲ್ಲಾಟವಾಡುತ್ತಿದೆ ಎಂದು ರೈತ ಮುಖಂಡ, ಹೋರಾಟಗಾರ ಕುರುಬೂರು ಶಾಂತಕುಮಾರ್ ಕಿಡಿಕಾರಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಉಭಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು ಮಾತನಾಡಿದ ಅವರು, ರಾಜ್ಯದ 220 ತಾಲೂಕುಗಳು ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿವೆ. ರೈತರು ಕೃಷಿ ಸಾಲ ಪಡೆದ ಬೆಳೆ ಮೇಲೆ ಹೂಡಿಕೆ ಮಾಡಿದ್ದಾರೆ. ಈಗ ಆ ಬೆಳೆ ನಾಶವಾಗಿದೆ. ರೈತ ಸಂಕಷ್ಟಕ್ಕೆ ಸಿಲುಕಿದ್ದಾನೆ ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸರಿಯಾದ ಬರ ಪರಿಹಾರ ಕ್ರಮ ಕೈಗೊಳ್ಳದೆ ರೈತರ ಜೊತೆ ಚೆಲ್ಲಾಟ ಆಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತರ ಸಾಲ ವಸೂಲಿಗೆ ಬ್ಯಾಂಕ್‌ಗಳು ಕಿರುಕುಳ ನೀಡುತ್ತಿದೆ. ಈ ತಕ್ಷಣವೇ ಇದೆಲ್ಲವೂ ನಿಲ್ಲಬೇಕು. ಕೈಗಾರಿಕೆ, ಉದ್ಯಮಿಗಳಿಗೆ ಸಂಕಷ್ಟದ ನೆರವು ಸಾಲ ಮನ್ನಾ ಮಾಡಿರುವ ರೀತಿ, ರೈತರ ಎಲ್ಲಾ ಬ್ಯಾಂಕು ಹಾಗೂ ಸಹಕಾರ ಸಂಘಗಳ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಲೇಬೇಕು ಎಂದು ಆಗ್ರಹಿಸಿದ್ದಾರೆ.
ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ, ಕಾನೂನು ಜಾರಿ ಮಾಡಬೇಕು. ಸ್ವಾಮಿನಾಥನ್ ಆಯೋಗದಂತೆ ಕನಿಷ್ಠ ಬೆಂಬಲ ಬೆಲೆ ನಿಗದಿಯಾಗಬೇಕು ಎಂದು ಒತ್ತಾಯಿಸಿ ಹಾಗೂ ರೈತರ ಹಲವು ಬೇಡಿಕೆಗಳ ಈಡೆರಿಕೆಗೆ ಆಗ್ರಹಿಸಿ ಡಿಸೆಂಬರ್23 ರಂದು ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಎಚ್ಚರಿಕೆ ನೀಡಿದ್ದಾರೆ.