ನವದೆಹಲಿ: ದೇಶದಾದ್ಯಂತ ಸಂಚಲನ ಮೂಡಿಸಿರುವ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಂಸತ್ ಚಲೋ ಪ್ರತಿಭಟನೆ ತೀವ್ರಗೊಂಡಿದೆ.

ನೀಟ್ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ, ವಿದ್ಯಾರ್ಥಿಗಳ ಆತ್ಮ** ಮತ್ತು ದೇಶದ ಪರೀಕ್ಷಾ ವ್ಯವಸ್ಥೆಗೆ ಸಂಬಂಧಿಸಿದಂತೆ ಕಾಕ್ರೋಚ್ ಜನತಾ ಪಾರ್ಟಿ(CJP) ಇಂದು ಸಂಸತ್ ಚಲೋ ಮೆರವಣಿಗೆ ಆರಂಭಿಸಿದೆ. ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಸಾಮಾಜಿಕ ಕಾರ್ಯಕರ್ತರು ವಿವಿಧ ರಾಜಕೀಯ ನಾಯಕರು ಹಾಗೂ ಸಾರ್ವಜನಿಕರು ಸೇರಿದಂತೆ ಈ ಪ್ರತಿಭಟನೆಯಲ್ಲಿ 50 ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗಿದ್ದಾರೆ ಎಂದು ವರದಿಯಾಗಿದೆ.

ಪ್ರತಿಭಟನಾ ವೇಳೆ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ವೇಳೆ ಪೊಲೀಸರ ಮೇಲೆ ಪ್ರತಿಭಟನಾಕಾರರಿಂದ ಕಲ್ಲುತೂರಾಟ ನಡೆದಿದ್ದು, ಹಲವು ಪೊಲೀಸರು ಕೂಡ ಗಾಯಗೊಂಡಿದ್ದಾರೆ. ಪ್ರತಿಭಟನಾಕಾರರ ಗುಂಪನ್ನು ಚದುರಿಸಲು ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಲಾಠಿ ಪ್ರಹಾರ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿ ತಳ್ಳಾಟ ನೂಕಾಟ ನಡೆದಿದ್ದು, ಪ್ರತಿಭಟನಾಕಾರರನ್ನು ದೆಹಲಿ ಪೊಲೀಸರು ನಡೆಸಿಕೊಂಡ ರೀತಿ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಇನ್ನು ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಕೇಂದ್ರ ಸರ್ಕಾರವು ಪ್ರತಿಭಟನಾಕಾರರನ್ನು ಮಾತುಕತೆಗೆ ಕರೆದಿದೆ ಎಂದು ಸಿಜೆಪಿ ಮೂಲಗಳು ತಿಳಿಸಿವೆ. ಸಂಘಟನೆಯ ಇಬ್ಬರು ವಕ್ತಾರರು ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಇತ್ತ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮುಂದಿನ ಕ್ರಮದ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ.





