ಬೆಳಗಾವಿ : ಏ.೧೪: ಅಥಣಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗದ ಕಾರಣ ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಪಕ್ಷ ಬಿಡುವ ಸುಳಿವು ನೀಡಿದ್ದ ಲಕ್ಷ್ಮಣ್ ಸವದಿ ಅವರು ಇಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಸೇರುವ ಬಗ್ಗೆ ಚರ್ಚೆ ನಡೆಸಿದರು.

ಇದಾದ ಕೆಲವೇ ಘಂಟೆಗಳಲ್ಲಿ ಲಕ್ಷ್ಮಣ್ ಸವದಿ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಹಾಗೂ ವಿವಿಧ ಹುದ್ದೆಗಳಿಗೂ ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟಿಲ್ ಅವರಿಗೆ ನೀಡಿದ್ದಾರೆ.

ಕಾಂಗ್ರೆಸ್ ನಾಯಕರನ್ನು ಭೇಟಿ ವೇಳೆಯಲ್ಲಿ ಲಕ್ಷ್ಮಣ್ ಸವದಿ ಪ್ರಮುಖ ಎರಡು ಬೇಡಿಕೆಗಳನ್ನು ಮುಂದಿಟ್ಟಿದ್ದರು. ಸದ್ಯ ಅಥಣಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಹಾಗೂ ಒಂದು ವೇಳೆ ಪಕ್ಷ ಗೆದ್ದು ಸರ್ಕಾರ ರಚಿಸಿದರೆ ಬೆಳಗಾವಿಯಲ್ಲಿ ನಿಂತಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವಂತೆ ಕೇಳಿದ್ದಾರೆ. ಇದಕ್ಕೆ ಕಾಂಗ್ರೆಸ್ ನಾಯಕರು ಓಕೆ ಎಂದಿದ್ದಾರೆ ಎಂದು ಲಕ್ಷ್ಮಣ್ ಸವದಿ ಹೇಳಿದರು. ಲಕ್ಷ್ಮಣ್ ಸವದಿ ಇಂದು ಸಂಜೆ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳಲಿದ್ದಾರೆ.