
ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಅಸ್ತು ಎನ್ನುತ್ತಿದ್ದಂತೆ ಬಿಜೆಪಿ ಹಾಗು ಜೆಡಿಎಸ್ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಜೊತೆಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎನ್ನುವ ಆಗ್ರಹ ಜೋರಾಗಿದೆ.

ಬೆಂಗಳೂರಿನಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕುವ ಪ್ರಯತ್ನ ಮಾಡಿದ್ದಾರೆ. ಸಿಎಂ ಕಾವೇರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನ ಮಾಡಿದ ಕೂಡಲೇ ಪೊಲೀಸ್ರು ಕೆಕೆ ಗೆಸ್ಟ್ ಹೌಸ್ ಗೇಟ್ ಬಳಿಯೇ ಬಿಜೆಪಿ ಕಾರ್ಯಕರ್ತರನ್ನ ವಶಕ್ಕೆ ಪಡೆಯುವ ಕೆಲಸ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿದ್ದು, ನಾಳೆ ಬಿಜೆಪಿ ಶಾಸಕರು, ಸಂಸದರು ಪರಿಷತ್ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಯಲಿದೆ.

ಜೆಡಿಎಸ್ ಕಾರ್ಯಕರ್ತರು ಕೂಡ ಸಿಎಂ ನಿವಾಸದತ್ತ ತೆರಳಲು ಮುಂದಾಗಿದ್ರು. ಈ ವೇಳೆ ಪೊಲೀಸ್ರು ಜೆಡಿಎಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಎಂಎಲ್‌ಸಿ ಟಿ.ಎ ಶರವಣ, ತಿಪ್ಪೇಸ್ವಾಮಿ, ರಮೇಶ್ ಗೌಡ ಸೇರಿದಂತೆ ಹಲವರನ್ನು ಪೊಲೀಸರ ವಶಕ್ಕೆ ಪಡೆದು ಬಿಡುಗಡೆ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಯಾದಗಿರಿ ನಗರದ ಸುಭಾಷ್ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ ಮಾಡಿದೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್‌ನಲ್ಲಿ ವಜಾ ಆಗಿದೆ. ಬಡವರಿಗೆ ಮೋಸ ಮಾಡಿರುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗದಗ ಬಿಜೆಪಿ ಕಾರ್ಯಕರ್ತರು ಟೈರ್‌ಗೆ ಬೆಂಕಿ ಹಚ್ಚಿ, ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದ್ದಾರೆ.. ಜಿಲ್ಲಾಡಳಿತ ಭವನದ ಎದುರು ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.





