ಬೆಂಗಳೂರು: ರಾಜ್ಯ ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯ (Election) ಮತ ಎಣಿಕೆ (Vote Counting) ಕಾರ್ಯ ಇಂದು ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ಆರಂಭಗೊಂಡಿದೆ. ಒಟ್ಟು ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಲಿದ್ದು, ಕಣದಲ್ಲಿರುವ ಒಟ್ಟು 43 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಇಂದು ನಿರ್ಧಾರವಾಗಲಿದೆ. ಅಕ್ಟೋಬರ್ 23 ರಂದು ಈ ಕ್ಷೇತ್ರಗಳಿಗೆ ಶಾಂತಿಯುತವಾಗಿ ಮತದಾನ ನಡೆದಿತ್ತು.
ವಿವಿಧ ಜಿಲ್ಲೆಗಳಲ್ಲಿ ಮತ ಎಣಿಕೆ ಕೇಂದ್ರಗಳು
ಪಶ್ಚಿಮ ಪದವೀಧರ ಕ್ಷೇತ್ರದ ಮತಪೆಟ್ಟಿಗೆಗಳನ್ನು ಧಾರವಾಡದ ಕೃಷಿ ವಿವಿ ಸ್ಟ್ರಾಂಗ್ ರೂಮ್‌ನಲ್ಲಿ ಇರಿಸಲಾಗಿದ್ದು, ಅಲ್ಲಿಯೇ ಮತ ಎಣಿಕೆ ನಡೆಯುತ್ತಿದೆ. ಈಶಾನ್ಯ ಶಿಕ್ಷಕರ ಕ್ಷೇತ್ರದ ಮತಪೆಟ್ಟಿಗೆಗಳನ್ನು ಕಲಬುರಗಿ ವಿವಿ ಗಣಿತಶಾಸ್ತ್ರ ವಿಭಾಗದ ಸ್ಟ್ರಾಂಗ್ ರೂಮ್‌ನಲ್ಲಿ ಇಡಲಾಗಿದ್ದು, ಅಲ್ಲಿ ಎಣಿಕೆ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಇನ್ನು ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಆಗ್ನೇಯ ಪದವೀಧರರ ಕ್ಷೇತ್ರದ ಮತಗಳ ಎಣಿಕೆಯು ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ರಸ್ತೆಯಲ್ಲಿರುವ ಸರ್ಕಾರಿ ಕಲಾ ಕಾಲೇಜಿನಲ್ಲಿ ನಡೆಯುತ್ತಿದೆ.
ಸ್ಟ್ರಾಂಗ್ ರೂಮ್ ಸುತ್ತ ಬಿಗಿ ಪೊಲೀಸ್ ಭದ್ರತೆ
ಬೆಳಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿರುವುದರಿಂದ ಎಲ್ಲ ಕೇಂದ್ರಗಳ ಬಳಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸ್ಟ್ರಾಂಗ್ ರೂಮ್‌ಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಧ್ಯಾಹ್ನದ ವೇಳೆಗೆ ಆರಂಭಿಕ ಮುನ್ನಡೆ ಹಾಗೂ ಸಂಜೆಯ ಹೊತ್ತಿಗೆ ಅಂತಿಮ ಫಲಿತಾಂಶದ ಸ್ಪಷ್ಟ ಚಿತ್ರಣ ಸಿಗುವ ನಿರೀಕ್ಷೆಯಿದೆ.
ಕುಕ್ಕೆ ಕ್ಷೇತ್ರದ ಪೂಜಾ ವಿಧಾನದ ಬದಲಾವಣೆಗೆ ಭಕ್ತರ ಆಕ್ಷೇಪ; ಹೋರಾಟದ ಎಚ್ಚರಿಕೆ






