ಬೆಂಗಳೂರು: ಕೇವಲ ಪ್ರಶಾಂತ್ ಮಾಡಾಳ್ ಅವರನ್ನು ಬಂಧಿಸುವುದಲ್ಲ, ಅವರ ತಂದೆ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ತಕ್ಷಣ ಬಂಧಿಸಬೇಕು ಮತ್ತು ಬೊಮ್ಮಾಯಿ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಆಗ್ರಹಿಸಿದರು.
ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಇಂದು ಕೆಪಿಸಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧದ ಎಲ್ಲಾ ಭ್ರಷ್ಟಾಚಾರದ ಆರೋಪಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ದಾಖಲೆ ಕೇಳುತ್ತಾರೆ, ಆದರೆ ನಮ್ಮ ಸರ್ಕಾರದ ಅವಧಿಯಲ್ಲಿ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಾಗ ಜಾರ್ಜ್ ಅವರು ತಪ್ಪು ಮಾಡದಿದ್ದರೂ ನೈತಿಕತೆ ಆಧಾರದಲ್ಲಿ ರಾಜೀನಾಮೆ ನೀಡಿದ್ದರು. ದೇವೇಗೌಡರು ನಮ್ಮ ವಿರುದ್ಧ ಒಂದಂಕಿ ಲಾಟರಿ ಆರೋಪ ಮಾಡಿದಾಗ ಕೂಡಲೇ ಸಿಬಿಐ ಗೆ ವಹಿಸಿದ್ದೆ, ಪರೇಶ್ ಮೇಸ್ತಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದೆ, ಈ ಯಾವುದೇ ಪ್ರಕರಣದಲ್ಲಿ ನಾವು ಬಿಜೆಪಿಯವರಿಂದ ದಾಖಲೆ ಕೇಳಿಲ್ಲ. ಇಂದು ಆ ಎಲ್ಲಾ ಪ್ರಕರಣಗಳಲ್ಲಿ ಸಿಬಿಐ ಬಿ ರಿಪೋರ್ಟ್ ನೀಡಿದೆ. ನಮ್ಮ ಮೇಲಿನ ಎಲ್ಲಾ ಆರೋಪಗಳು ಸುಳ್ಳು ಎಂದು ಸಾಬೀತಾಗಿದೆ. ಈ ಬಸವರಾಜ ಬೊಮ್ಮಾಯಿ ಅಧಿಕಾರಕ್ಕೆ ಅಂಟಿಕೊಂಡು ಕೂತಿದ್ದಾರೆ. ಒಂದನ್ನಾದರೂ ತನಿಖೆ ಮಾಡಿಸಿದ್ರಾ? ಎಂದು ಪ್ರಶ್ನಿಸಿದರು.
ಪ್ರತಿ ಕ್ಷೇತ್ರ ಗೆಲ್ಲಲು 100 ಕೋಟಿ ಖರ್ಚು ಮಾಡಿದರೂ ಆಶ್ಚರ್ಯವಿಲ್ಲ
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಸೇರಿಕೊಂಡು ಮಂತ್ರಿಗಳು, ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು ಇಂತಿಷ್ಟು ಲಂಚ ಕಲೆಕ್ಷನ್ ಮಾಡಿಕೊಡಬೇಕು ಎಂದು ನಿಗದಿ ಮಾಡಿದ್ದಾರೆ. ಅವರಿಗೆ ಈ ಬಾರಿ ಜಾತಿ, ಧರ್ಮಗಳ ಆಧಾರದಲ್ಲಿ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂಬುದು ಅರಿವಾಗಿದೆ. ಮುಂದಿನ ಚುನಾವಣೆಯಲ್ಲಿ ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲಲು ಕನಿಷ್ಠ 100 ಕೋಟಿ ಖರ್ಚು ಮಾಡಿದರೂ ಆಶ್ಚರ್ಯ ಇಲ್ಲ ಎಂದು ಹರಿಹಾಯ್ದರು.
ಗಡಿಪಾರಾಗಿದ್ದ ಶಾ ಅವರಿಂದ ಪಾಠ ಕಲಿಯಬೇಕಾ

8 ಕೋಟಿಗೂ ಅಧಿಕ ಮೊತ್ತದ ಹಣ, ಆಭರಣಗಳನ್ನು ಲೋಕಾಯುಕ್ತದವರು ಮಾಡಾಳ್ ವಿರೂಪಾಕ್ಷಪ್ಪ ಅವರ ಮನೆಯಿಂದ ಸೀಜ್ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರ ಎಐಸಿಸಿಗೆ ಎಟಿಎಂ ಆಗಿತ್ತು ಎಂದು ಅಮಿತ್ ಶಾ ಅವರು ನಿನ್ನೆ ಆರೋಪ ಮಾಡಿದ್ದಾರೆ, ಇದಕ್ಕೇನು ಹೇಳ್ತೀರಿ ಶಾ? ಗಡಿಪಾರಾಗಿದ್ದ, ಜೈಲಿಗೆ ಹೋಗಿದ್ದ ಶಾ ಅವರಿಂದ ಪಾಠ ಕಲಿಯಬೇಕಾ ನಾವು? ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿಂಪತಿ ಗಳಿಸಲು ಮೋದಿ ನಾಟಕ
ಮರ್ ಜಾ ಮೋದಿ ಎಂದು ಕಾಂಗ್ರೆಸ್ ನವರು ಹೇಳುತ್ತಾರೆ ಎಂದು ಪ್ರಧಾನಿ ಮೋದಿ ಅವರು ಜನರ ಸಿಂಪತಿ ಗಳಿಸಲು ನಾಟಕ ಮಾಡುತ್ತಿದ್ದಾರೆ. ನಿಮ್ಮ ಬಳಿ ಇಂಟಲಿಜೆನ್ಸ್ ಇದೆ, ರಾ ಇದೆ, ಹೀಗೆ ಕೂಗಿದವರನ್ನು ಜೈಲಿಗೆ ಹಾಕೋದಲ್ವಾ ಮೋದಿಜಿ? ಇನ್ನು ಯಾಕೆ ಸುಮ್ಮನಿದ್ದೀರಿ? ಎಂದರು.
ನಾವು ಅಧಿಕಾರಕ್ಕೆ ಬಂದ ಮೇಲೆ ಎಲ್ಲಾಕಾಮಗಾರಿಗಳ ರದ್ದು
ನೂರಕ್ಕೆ ನೂರು ಮುಂದೆ ನಾವು ಅಧಿಕಾರಕ್ಕೆ ಬರುತ್ತೇವೆ, ನಾವು ಅಧಿಕಾರಕ್ಕೆ ಬಂದ ತಕ್ಷಣ ಕೊನೆಯ 6 ತಿಂಗಳಿಂದ ಟೆಂಡರ್ ನೀಡಿರುವ ಕಾಮಗಾರಿಗಳನ್ನು ಪುನರ್ ಪರಿಶೀಲನೆಗೆ ಒಳಪಡಿಸುತ್ತೇವೆ. ಯಾವುದೇ ಗುತ್ತಿಗೆದಾರರು ಈಗ ಲಂಚ ನೀಡಿ ಗುತ್ತಿಗೆ ಕೆಲಸ ಹಿಡಿಯಬೇಡಿ, ಕಾರಣ ನಾವು ಬಂದ ಮೇಲೆ ಆ ಎಲ್ಲಾ ಕಾಮಗಾರಿಗಳನ್ನು ರದ್ದು ಮಾಡುತ್ತೇವೆ ಎಂದರು.