ಬೆಂಗಳೂರು : ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕದ ಜೊತೆ ಮಾತುಕತೆಗೆ ಮುಂದಾಗಿರುವ ತಮಿಳುನಾಡಿನ ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಅವರ ನಡೆಗೆ ಅಲ್ಲಿನ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ, ಮುಖ್ಯಮಂತ್ರಿ ವಿಜಯ್ ಜೋಸೆಫ್ ನಿರ್ಧಾರ ನಮ್ಮ ರಾಜ್ಯಕ್ಕೆ ರಾಜಕೀಯವಾಗಿ ಹಾಗೂ ಕಾನೂನಿನ ದೃಷ್ಟಿಯಲ್ಲಿ ಹಿನ್ನಡೆಯಾಗಲಿದೆ. ಹೀಗಾಗಿ ಕರ್ನಾಟಕ ಮುಖ್ಯಮಂತ್ರಿಯ ಜೊತೆ ನೇರವಾಗಿ ಮಾತುಕತೆ ನಡೆಸುವುದು ಬೇಡ ಎಂದು ಸಲಹೆ ನೀಡಿದ್ದಾರೆ.
ನಮ್ಮದು ಹೋರಾಟದ ಹಾದಿ ಏನೇ ಇದ್ದರೂ ನಾವು ನ್ಯಾಯಾಲಯದ ಮೂಲಕವೇ ಕಾವೇರಿ ನದಿ ನೀರನ್ನು ಪಡೆಯಬೇಕಿದೆ. ನೀರನ್ನು ಪಡೆಯುವ ವಿಚಾರದಲ್ಲಿ ರಾಜೀ ಮಾಡಿಕೊಳ್ಳಬಾರದು. ನಮ್ಮ ರಾಜ್ಯದ ಹಿತಕ್ಕಾಗಿ ತಮಿಳುನಾಡು ಮುಖ್ಯಮಂತ್ರಿ ಅವರ ತೀರ್ಮಾನವನ್ನು ಮತ್ತೊಮ್ಮೆ ಪರಿಶೀಲಿಸಬೇಕು ಎಂದು ಎಡಪ್ಪಾಡಿ ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಧಾರವಾಡದಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಇಲ್ಲಿದೆ ಸಂಪೂರ್ಣ ಮಾಹಿತಿ
ಅಲ್ಲದೆ ಕಾವೇರಿ ನೀರು ವಿವಾದ ಮತ್ತು ಮೇಕೇದಾಟು ಯೋಜನೆಯ ಬಗ್ಗೆ ಚರ್ಚಿಸಲು ಸರ್ವಪಕ್ಷಗಳ ಸಭೆ ಕರೆಯುವಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ಸಲಹೆ ನೀಡಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿದ್ದರೂ ತಮಿಳುನಾಡು ಸರ್ಕಾರ ಕಾನೂನು ಮತ್ತು ರಾಜಕೀಯ ಒತ್ತಡ ಹೇರದೆ ಮೌನ ವಹಿಸಿರುವುದನ್ನು ಟೀಕಿಸಿದ್ದಾರೆ.

ಪ್ರಮುಖವಾಗಿ ಕಾವೇರಿ ನದಿಯು ತಮಿಳುನಾಡಿನ ಬಹುತೇಕ ಜಿಲ್ಲೆಗಳಲ್ಲಿ ನೀರಿನ ಮೂಲ ಆಧಾರವಾಗಿದೆ. ಪರಿಸ್ಥಿತಿ ಹೀಗಿರುವಾಗ ಮೇಕೆದಾಟು ಅಣೆಕಟ್ಟು ನಿರ್ಮಾಣವಾದರೆ ರಾಜ್ಯದ ಹಲವು ಜಿಲ್ಲೆಗಳ ಫಲವತ್ತಾದ ಭೂಮಿಯನ್ನು ಕಳೆದುಕೊಳ್ಳುತ್ತೇವೆ. ಹೀಗಿರುವಾಗ ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮೇಕೆದಾಟು ಯೋಜನೆ ಮಾಡಲು ಮುಂದಾಗುತ್ತಿರುವುದು ತಮಿಳುನಾಡಿನ ರೈತರ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಕಿಡಿಕಾರಿದ್ದಾರೆ.
ತಮಿಳುನಾಡು ಸರ್ಕಾರ ರೈತರ ಬೆಳೆ ಸಾಲ ಮನ್ನಾ ಮಾಡುವಲ್ಲಿ ವಿಫಲವಾಗಿದೆ, ಆ ವಿಷಯವನ್ನೂ ಸರ್ವ ಪಕ್ಷಗಳ ಸಭೆಯಲ್ಲಿ ಚರ್ಚಿಸಬೇಕು. ಸರ್ಕಾರ ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಜ್ಯಾದ್ಯಂತ ತೀವ್ರ ಪ್ರತಿಭಟನೆ ನಡೆಸುವುದಾಗಿ ಎಡಪ್ಪಾಡಿ ಪಳನಿಸ್ವಾಮಿ ಟವಿಕೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.






