
ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ದೆಹಲಿಯ ಅಪೋಲೊ ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಮಾಡಲಾಗಿದೆ. ಅಪೋಲೊ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಎಲ್.ಕೆ.ಅಡ್ವಾಣಿ ಅವರ ಆರೋಗ್ಯ ಚೇತರಿಕೆ ಕಂಡಿದೆ. ಹಾಗಾಗಿ, ಗುರುವಾರ (ಜುಲೈ 4) ಸಂಜೆ ಅವರನ್ನು ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಮಾಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.ಬುಧವಾರ (ಜುಲೈ 3) ರಾತ್ರಿ 9 ಗಂಟೆ ಸುಮಾರಿಗೆ ಎಲ್.ಕೆ.ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಇದಾದ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. 96 ವರ್ಷದ ಎಲ್.ಕೆ.ಅಡ್ವಾಣಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಜೂನ್ 27ರಂದು ಕೂಡ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಹಾಗಾಗಿ ಅವರನ್ನು ಅದೇ ರಾತ್ರಿ ದೆಹಲಿಯಲ್ಲಿರುವ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಅವರನ್ನು ಡಿಸ್‌ಚಾರ್ಜ್ ಮಾಡಲಾಗಿತ್ತು.
ಅಡ್ವಾಣಿ ಅವರಿಗೆ ಈ ವರ್ಷದ ಮಾರ್ಚ್‌ನಲ್ಲಿ ಭಾರತ ರತ್ನ ಪ್ರಶಸ್ತಿಯನ್ನು ನೀಡಲಾಗಿತ್ತು. ಅವರ ನಿವಾಸದಲ್ಲಿಯೇ ಈ ಅತ್ಯುನ್ನತ ನಾಗರಿಕ ಗೌರವವನ್ನು ಸಲ್ಲಿಸಲಾಗಿತ್ತು. ರಾಷ್ಟ್ರಪತಿ ದ್ರೌಪದಿ ಮುರ್ಮು ಇದನ್ನು ಕೊಡಮಾಡಿದ್ದರು. ಔಪಚಾರಿಕ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧನಕರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಎಲ್ ಕೆ ಅಡ್ವಾಣಿ ಅವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.