ಚಿಕ್ಕಮಗಳೂರು: ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಹೈಕೋರ್ಟ್ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಪರ ತೀರ್ಪು ನೀಡಿದೆ. ಇದರ ಬೆನ್ನಲ್ಲೇ ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ ಪ್ರಾಣೇಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಕಾರ್ಯಕರ್ತರಿಗೆ ಸಂದೇಶ ನೀಡಿರುವ ಪ್ರಾಣೇಶ್, ನ್ಯಾಯಾಲಯದ ತೀರ್ಪನ್ನು ಗೌರವಿಸಿ ರಾಜೀನಾಮೆ ನೀಡುತ್ತಿದ್ದೇನೆ. ಕಳೆದ ನಾಲ್ಕೂವರೆ ವರ್ಷಗಳಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಯಾರೂ ನಿರಾಶರಾಗಬೇಡಿ. ಮುಂದಿನ ದಿನಗಳಲ್ಲಿ ಇನ್ನಷ್ಟು ಶಕ್ತಿಯುತವಾಗಿ ಕೆಲಸ ಮಾಡೋಣ. ಅಧಿಕಾರ ಇಲ್ಲದಿದ್ದರೂ ಸಾಮಾನ್ಯ ಕಾರ್ಯಕರ್ತನಾಗಿ ನಿಮ್ಮೊಂದಿಗೆ ಇರುತ್ತೇನೆ ಎಂದು ಪ್ರಾಣೇಶ್ ಭಾವನಾತ್ಮಕ ಸಂದೇಶ ನೀಡಿದ್ದಾರೆ.

2021ರ ವಿಧಾನ ಪರಿಷತ್ ಚುನಾವಣೆಯಲ್ಲಿ ಪ್ರಾಣೇಶ್ ಅವರು ಕೇವಲ 6 ಮತಗಳ ಅಂತರದಿಂದ ಗೆದ್ದಿದ್ದರು. ಈ ಫಲಿತಾಂಶವನ್ನು ಪ್ರಶ್ನಿಸಿ ಗಾಯತ್ರಿ ಶಾಂತೇಗೌಡ ಹೈಕೋರ್ಟ್ ಮೊರೆ ಹೋಗಿದ್ದರು. ನಾಮನಿರ್ದೇಶಿತ ಸದಸ್ಯರ ಮತದಾನ ಹಾಗೂ ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಅವರು ಆರೋಪಿಸಿದ್ದರು.

ಹೈಕೋರ್ಟ್ ಮರುಎಣಿಕೆಗೆ ಆದೇಶ ನೀಡಿದ ಬಳಿಕ, ಮರುಎಣಿಕೆಯಲ್ಲಿ ಗಾಯತ್ರಿ ಶಾಂತೇಗೌಡ 9 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸಿರುವ ಪ್ರಾಣೇಶ್, ಜಿಲ್ಲೆಯ ಅಭಿವೃದ್ಧಿಗೆ ಉತ್ತಮವಾಗಿ ಕೆಲಸ ಮಾಡಲಿ ಎಂದು ಹಾರೈಸಿದ್ದಾರೆ.







